ಹೊಸದಿಗಂತ ವರದಿ,ಚಿತ್ರದುರ್ಗ :
ಸರ್ಕಾರ ನಿಮ್ಮ ಜೊತೆಗಿದೆ, ನಿಮಗೆ ನ್ಯಾಯ ದೊರಕಿಸಿಕೊಡುವ ಕೆಲಸ ಮಾಡುತ್ತದೆ. ಹಾಗಾಗಿ ನೀವು ಹೆದರುವ ಅಗತ್ಯವಿಲ್ಲ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಭಯ ನೀಡಿದರು.
ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಗೀಡಾಗಿರುವ ರೇಣುಕಾಸ್ವಾಮಿ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದ ಅವರು, ಯಾರು ಎಷ್ಟೇ ದೊಡ್ಡ ವ್ಯಕ್ತಯಾಗಿರಲಿ. ಕಾನೂನು ಕೈಗೆ ತೆಗೆದುಕೊಳ್ಳಬಾರದು. ಚಿತ್ರನಟ ಇರಲಿ, ರಾಜಕಾರಣಿ ಇರಲಿ. ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೆ. ಹಾಗಾಗಿ ಯಾರೂ ಕಾನೂನು ಮೀರಿ ನಡೆಯಬಾರದು ಎಂದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಕುರಿತು ತನಿಖೆ ನಡೆಸುವಲ್ಲಿ ರಾಜ್ಯ ಸರ್ಕಾರದಿಂದ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ್ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ಮುಂದೇನು ಮಾಡಬೇಕೆಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ, ಮೃತನ ಕುಟುಂಬಸ್ಥರಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರೇಣುಕಾಸ್ವಾಮಿ ಕುಟುಂಬದವರಿಗೆ ೨ ಲಕ್ಷ ರೂ. ನೆರವು ನೀಡಿದರು. ಕೆಡಿಪಿ ಸದಸ್ಯ ಕೆ.ಸಿ.ನಾಗರಾಜು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ಪೀರ್, ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.