ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೆಳಗ್ಗೆ 6 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಆರು ಮಂದಿಯನ್ನು ಹೊರತೆಗೆದು ಸದರ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದಾರೆ. ಒಂದು ಮಗು ಸೇರಿದಂತೆ ಮೂವರಿಗೆ ಚಿಕಿತ್ಸೆ ನಡೆಯುತ್ತಿದೆ. ದಿಯೋಘರ್ ಸಿವಿಲ್ ಸರ್ಜನ್ ರಂಜನ್ ಸಿನ್ಹಾ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯನ್ನು (ಎನ್ಡಿಆರ್ಎಫ್) ನಿಯೋಜಿಸಲಾಗಿದೆ.