2022ನೇ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ. ದೇಶಪಾಂಡೆ ಆಯ್ಕೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

2022ನೇ ವರ್ಷದ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಆಯ್ಕೆಯಾಗಿದ್ದಾರೆ.
ವಿಧಾನಸಭೆ ಕಲಾಪ ಇಂದು ಆರಂಭವಾಗುತ್ತಿದ್ದಂತೆಯೇ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆರ್. ವಿ. ದೇಶಪಾಂಡೆ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು. ಕಳೆದ ವರ್ಷದಿಂದ ಆರಂಭವಾಗಿರುವ ಈ ಪ್ರಶಸ್ತಿ ಪಡೆದಿರುವ ಎರಡನೇ ಶಾಸಕರು ಇವರಾಗಿದ್ದು, ಮೊದಲ ಪ್ರಶಸ್ತಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಪಡೆದುಕೊಂಡಿದ್ದರು.

ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ ಸದನದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಿ, ಗೌರವಿಸಿದರು.

1947, ಮಾರ್ಚ್ 16 ರಂದು ಜನಿಸಿದ 75 ವರ್ಷದ ಹಿರಿಯ ನಾಯಕ ಆರ್. ವಿ. ದೇಶಪಾಂಡೆ ಅವರು 1983 ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದರು. ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿದ್ದ ಅವರು ಜನತಾ ಪರಿವಾರದೊಂದಿಗೆ ವಿಧಾನಸಭೆ ಪ್ರವೇಶಿಸಿದರು. 8 ಬಾರಿ ಶಾಸಕರಾಗಿ ಕೆಲಸ ಮಾಡಿದ್ದು, ಒಂದು ಬಾರಿ ಅವರು ಚುನಾವಣೆಯಲ್ಲಿ ಸೋತಿದ್ದರು.

ಸಚಿವರಾಗಿ ಕಾರ್ಯನಿರ್ವಹಿಸಿರುವ ಅವರು, ಎಸ್ .ಎಂ. ಕೃಷ್ಣ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ದೀರ್ಘಾವಧಿ ಕೈಗಾರಿಕಾ ಸಚಿವರಾಗಿದ್ದರು. ಪ್ರತಿಪಕ್ಷದ ನಾಯಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ, ಸ್ಪೀಕರ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ಮಾತನಾಡಿ, ದೇಶಪಾಂಡೆ ಅವರಿಗೆ ಅಭಿನಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!