ಉತ್ತರಾಖಂಡ: ಕಂದಕಕ್ಕೆ ಉರುಳಿದ ಚಾರ್ ಧಾಮ್‌ ಯಾತ್ರಾರ್ಥಿಗಳಿದ್ದ ಬಸ್; 22 ಜನರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಯಮುನೋತ್ರಿಗೆ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ಉತ್ತರಕಾಶಿ ಜಿಲ್ಲೆಯ ದಮ್ಟಾ ಬಳಿ ಕಮರಿಗೆ ಬಿದ್ದ ಪರಿಣಾಮ ಇಪ್ಪತ್ತೆರಡು ಜನರು ಸಾವನ್ನಪ್ಪಿ, ಆರು ಜನರು ಗಾಯಗೊಂಡಿದ್ದಾರೆ ಎಂದು ಉತ್ತರಾಖಂಡ್ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಿಂದ ಯಮುನೋತ್ರಿಗೆ 28 ​​ಯಾತ್ರಿಕರನ್ನು ಹೊತ್ತೊಯ್ಯುತ್ತಿತ್ತು. ಯಾತ್ರಿಕರು ಮಧ್ಯಪ್ರದೇಶದ ಪನ್ನಾ ಜಿಲ್ಲೆಗೆ ಸೇರಿದವರು. ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ರುಹೇಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. “ಸ್ಥಳದಲ್ಲಿ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಉತ್ತರಾಖಂಡ ಡಿಜಿಪಿ ಅಶೋಕ್ ಕುಮಾರ್ ಹೇಳಿದ್ದಾರೆ.
ಯಮುನೋತ್ರಿ ಜೊತೆಗೆ ಬದರಿನಾಥ, ಕೇದಾರನಾಥ, ಗಂಗೋತ್ರಿಯ ಪುಣ್ಯಕ್ಷೇತ್ರಗಳನ್ನು ಸಾಮಾನ್ಯವಾಗಿ ಚಾರ್ ಧಾಮ್ ಎಂದು ಕರೆಯಲಾಗುತ್ತದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವು ಸ್ಥಳಕ್ಕೆ ಧಾವಿಸಿದೆ ಎಂದು ಗೃಹ ಸಚಿವ ನಿತ್ಯಾನಂದ ರೈ ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನೂ ಇಬ್ಬರು ಪ್ರಯಾಣಿಕರು ಮತ್ತು ಬಸ್‌ನ ಚಾಲಕ ಮತ್ತು ಕಂಡಕ್ಟರ್‌ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದರು.
ಪುರೋಲಾ ಪೊಲೀಸ್ ಠಾಣೆ ವ್ಯಾಪ್ತಿಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ದಮ್ಟಾದಿಂದ ಸುಮಾರು 4 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ವಾಹನ ಕಮರಿಗೆ ಉರುಳಿ ಬಿದ್ದ ಪರಿಣಾಮ ನುಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!