ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಈ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇದಾರನಾಥಕ್ಕೆ ಹೋಗುವ ಮಾರ್ಗದಲ್ಲಿ ಗೌರಿಕುಂಡ್ ಬಳಿಯ ದಾಟ್ ಪುಲಿಯ ಎಂಬಲ್ಲಿ ಗುರುವಾರ ತಡರಾತ್ರಿ ಉಂಟಾದ ಭೂಕುಸಿತದಿಂದಾಗಿ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ ಎಂದು ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎಸ್‌ಡಿಆರ್‌ಎಫ್) ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸಿತ್ತು. ಈ ಕಾರ್ಯಾಚರಣೆಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು, 17 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ.