ಕುಶಾಲನಗರದಲ್ಲಿ 30 ಹಾಸಿಗೆಯ ಇಎಸ್ಐ ಆಸ್ಪತ್ರೆ: ಕೇಂದ್ರ ಸರಕಾರದಿಂದ ಅನುಮೋದನೆ

ದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯ ಕುಶಾಲನಗರ ಬಳಿ 30 ಹಾಸಿಗೆಯ ಇಎಸ್‍ಐ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಕನಿಷ್ಟ 4 ಎಕರೆ ಭೂಮಿ ಅಗತ್ಯವಿದೆ. ಅದನ್ನು ಗುರುತಿಸುವಂತೆ ಸಂಸದರಾದ ಪ್ರತಾಪ್ ಸಿಂಹ ಅವರು ಸೂಚಿಸಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ‌ ಶಾಸಕ ಅಪ್ಪಚ್ಚು ರಂಜನ್ ಅವರು, ಕುಶಾಲನಗರದಲ್ಲಿ ಇಎಸ್‍ಐ ಆಸ್ಪತ್ರೆ ನಿರ್ಮಾಣ ಸಂಬಂಧ ಜಾಗ ಗುರುತಿಸಲಾಗಿದ್ದು, ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ನಾಗರಾಜು ಅವರು ಕುಶಾಲನಗರದಿಂದ ಸಂಪಾಜೆವರೆಗೆ 22 ಕಡೆ ತಡೆಗೋಡೆ ಹಾಗೂ ಸೇತುವೆ ನಿರ್ಮಾಣ, ಜೊತೆಗೆ ಹೆಚ್ಚುವರಿಯಾಗಿ 6 ಕಡೆ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ ಎಂದರು. ಜೋಡುಪಾಲ ಬಳಿ 4 ಪಥ ರಸ್ತೆ ನಿರ್ಮಾಣಕ್ಕೆ ಕ್ರಮವಹಿಸುವಂತೆ ಸಂಸದರು ಸೂಚಿಸಿದರು.
ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ನಿರ್ಮಾಣ ಮಾಡಲಾಗಿರುವ ಆಮ್ಲಜನಕ ಪ್ಲ್ಯಾಂಟ್‍ಗಳನ್ನು ಕ್ರಿಯಾಶೀಲವಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ಮಾಡಿದರೆ, ಸುಂಟಿಕೊಪ್ಪ ಆರೋಗ್ಯ ಕೇಂದ್ರಕ್ಕೆ ವೈದ್ಯರನ್ನು ನಿಯೋಜಿಸುವಂತೆ ಶಾಸಕರು ತಿಳಿಸಿದರು.
ಶೇ.100ರಷ್ಟು ಸಾಧನೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಮಾತನಾಡಿ, ಕೋವಿಡ್ ನಿರೋಧಕ ಲಸಿಕೆ ಪ್ರಥಮ ಮತ್ತು ದ್ವಿತೀಯ ಡೋಸ್ ಶೇ.100 ರಷ್ಟು ಸಾಧನೆ ಮಾಡಲಾಗಿದೆ. ಕುಶಾಲನಗರ ತಾಲೂಕು ಕೇಂದ್ರದಲ್ಲಿ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಜಾಗ ದೊರಕಿದೆ. ಜೊತೆಗೆ ಪೊನ್ನಂಪೇಟೆಯಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಬೇಕಿದೆ ಎಂದು ಸಭೆಯ ಗಮನಕ್ಕೆ ತಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!