ಹೊಸದಿಗಂತ ವರದಿ ಕಲಬುರಗಿ:
ಕಳೆದ ಜುಲೈ-ಆಗಸ್ಟ್ ಮಾಹೆಯಲ್ಲಿ ಸುರಿದ ಮಳೆಯಿಂದ ರಾಜ್ಯದಲ್ಲಾದ ಬೆಳೆ ಹಾನಿಗೆ ಕಳೆದ ಒಂದು ವಾರದಲ್ಲಿ 300 ಕೋಟಿ ರೂ.ಗಳಿಗೂ ಹೆಚ್ಚು ಬೆಳೆ ಪರಿಹಾರ ಹಣ ಬಿಡುಗಡೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬೆಳೆ ಹಾನಿ ಕುರಿತಂತೆ ಡಿಸಿ. ಅವರಿಂದ ವರದಿ ಪಡೆದುಕೊಂಡು ತಕ್ಷಣ ಪರಿಹಾರ ನೀಡಲಾಗುತ್ತಿದೆ. ಹಿಂದೆಲ್ಲ ಪರಿಹಾರ ನೀಡಲು ವರ್ಷಗಟ್ಟಲೆ ಬೇಕಾಗುತಿತ್ತು. ಇದೀಗ ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿದ ಕೂಡಲೆ ರೈತರಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.
ಒಣ ಬೇಸಾಯದ ಪ್ರತಿ ಹೆಕ್ಟೇರ್‌ಗೆ 6,800 ರೂ. ಗಳಿಂದ 13,600 ರೂ.ಗಳಿಗೆ, ನೀರಾವರಿ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 13,000 ರೂ. ಗಳಿಂದ 25,000 ರೂ. ಗಳಿಗೆ ಹಾಗೂ ತೋಟಗಾರಿಕೆ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 18,000 ರೂ. ಗಳಿಂದ 28,000 ರೂ. ಗಳಿಗೆ ಬೆಳೆ ಪರಿಹಾರ ಹೆಚ್ಚಿಸಿದೆ. ಎನ್.ಡಿ.ಆರ್.ಎಫ್. ಮಾರ್ಗಸೂಚಿ ಮೀರಿ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ಅನ್ನದಾತನಿಗೆ ನಮ್ಮ ಸರ್ಕಾರ ನೀಡಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಮ್ಸ್ ಘಟನೆ ತನಿಖೆ ನಡೆಯುತ್ತಿದೆ:
ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಐ.ಸಿ.ಯು ವಿಭಾಗದಲ್ಲಿ ವಿದ್ಯುತ್ ಕೈಕೊಟ್ಟು ಮೃತರಾದ ಪ್ರಕರಣ ಕುರಿತಂತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಕರಣದ ತನಿಖೆಗೆ ಆದೇಶಿಸಿದೆ. ಅಧಿಕಾರಿಗಳಿಂದ ವರದಿ ಬಂದ ಕೂಡಲೆ ಮುಂದಿನ ಕ್ರಮ ವಹಸಲಾಗುವುದು ಎಂದರು.