ಹೊಸದಿಗಂತ ಡಿಜಿಟಲ್ ಡೆಸ್ಕ್
ಕೈಗಾರಿಕೆಗಳ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ 1747.37 ಕೋಟಿ ರೂ. ಬಂಡವಾಳ ಹೂಡಿಕೆಯ 35 ಯೋಜನೆಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಅನುಮೋದನೆ ನೀಡಿದೆ.
ಶುಕ್ರವಾರ ಸಂಜೆ ʼಕರ್ನಾಟಕ ಉದ್ಯೋಗ ಮಿತ್ರʼ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ನಡೆದ 135 ನೇ ರಾಜ್ಯ ಮಟ್ಟದ ಏಕಗಾವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಬಂಡವಾಳ ಹೂಡಿಕೆಯ ಯೋಜನೆಗೆ ಅನುಮೋದನೆ ನೀಡಲಾಗಿದೆ.
ಒಟ್ಟು 35 ಬೃಹತ್ ಮತ್ತು ಮಧ್ಯಮ ಗಾತ್ರದ ಯೋಜನೆಗಳಿಂದ 1747.47 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದೆ. ಈ ಮೂಲಕ 4904 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.
50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು,ಇವುಗಳಿಂದ ರೂ. 949,11 ಕೋಟಿ ಬಂಡವಾಳ ಹೂಡಿಕೆಯಾಗಿ ಸುಮಾರು 2461 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು.
15 ಕೋಟೆಯಿಂದ ರೂ.50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 25 ಹೊಸ ಯೋಜನೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದ್ದು, ಇವುಗಳಿಂದ ರೂ. 567.43 ಕೋಟಿ ಬಂಡವಾಳ ಹೂಡಿಕೆ ಹಾಗೂ 2443 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ ರೂ. 230.83 ಕೋಟಿ ಬಂಡವಾಳ ಹೂಡಿಕೆಯಾಗಲಿದೆ.
ಮೇಲ್ಕಂಡ ಒಟ್ಟು 35ಯೋಜನೆಗಳಿಂದ ರೂ. 1747.37 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 4904 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ, ಆಯುಕ್ತೆ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ