Wednesday, August 17, 2022

Latest Posts

ಕೊಡಗು‌ ಜಿಲ್ಲೆಯಲ್ಲಿ 37 ಡೆಂಗ್ಯೂ, 33 ಇಲಿಜ್ವರ ಪ್ರಕರಣ ಪತ್ತೆ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು‌ ಜಿಲ್ಲೆಯಲ್ಲಿ 37 ಡೆಂಗ್ಯೂ, 33 ಇಲಿಜ್ವರ, 5 ಮಲೇರಿಯಾ ಹಾಗೂ 6 ಚಿಕುನ್‌ಗುನ್ಯ ಪ್ರಕರಣಗಳು ಕಂಡುಬಂದಿವೆ ಎಂದು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾಹಿತಿ ನೀಡಿದ್ದಾರೆ.
ನಗರದ ಜಿ.ಪಂ.ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ, ಲಸಿಕಾ ಪ್ರಗತಿ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯಾಧಿಕಾರಿಗಳು ಸಾಂಕ್ರಾಮಿಕ ರೋಗ ಹೆಚ್ಚು ಕಂಡುಬಂದಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಜಂಬೂರಿನಲ್ಲಿ ಇನ್ಫೋಸಿಸ್ ವತಿಯಿಂದ 100 ಮನೆಗಳನ್ನು ನಿರ್ಮಾಣ ಮಾಡಲಾಗಿದ್ದು, ವಿದ್ಯುತ್, ಚರಂಡಿ, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸಬೇಕಿದೆ ಎಂದು ಹೇಳಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಅಮೃತ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಲಾಗಿದ್ದು, ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಘನ ತ್ಯಾಜ್ಯ ವಿಂಗಡಣೆ ಮತ್ತು ವಿಲೇವಾರಿ, ತ್ಯಾಜ್ಯ ನೀರಿನ ವೈಜ್ಞಾನಿಕ ನಿರ್ವಹಣೆ, ಸೌರ ವಿದ್ಯುತ್ ಘಟಕ ಅಳವಡಿಕೆ, ಡಿಜಿಟಲ್ ಗ್ರಂಥಾಲಯ ಸ್ಥಾಪನೆ, ಅಮೃತಗ್ರಾಮ ವಸತಿ ಯೋಜನೆ ಅನುಷ್ಠಾನ, ಪ್ರಯೋಗಾಲಯ, ಶೌಚಾಲಯ ನಿರ್ಮಾಣ, ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಕಿರು ಉದ್ದಿಮೆಗಳ ಆರಂಭ, ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಜಲ ಜೀವನ್ ಮಿಷನ್ ಯೋಜನೆ, ಸ್ವಚ್ಛ ಭಾರತ ಅಭಿಯಾನದಡಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.
ಪ್ರಸಕ್ತ ವರ್ಷದಲ್ಲಿ ಜಿ.ಪಂ.ವ್ಯಾಪ್ತಿಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ವ್ಯಪಗತವಾಗದಂತೆ ಎಚ್ಚರವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಲೋಕೋಪಯೋಗಿ ಇಲಾಖೆ ಇಇ ನಾಗರಾಜು ಅವರು ಲೋಕೋಪಯೋಗಿ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಹಲವು ಇಲಾಖೆ ಅಧಿಕಾರಿಗಳು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!