ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿದ್ದಾರೆ ಎಂದು ರಾಜಭವನದ ಮೂಲಗಳು ಬುಧವಾರ ತಿಳಿಸಿವೆ.
ಗೆಹ್ಲೋಟ್ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದ್ದಾರೆ.
ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕಳೆದ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರ ಉಭಯ ಸದನಗಳಲ್ಲೂ ಮಸೂದೆ ಮಂಡಿಸಿ ಅಂಗೀಕರಿಸಿದೆ.
ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಭಾರತೀಯ ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲದ ಕಾರಣ ಮಸೂದೆ ಕಾನೂನುಬಾಹಿರ. ಆಡಳಿತಾರೂಢ ಕಾಂಗ್ರೆಸ್ ತುಷ್ಟೀಕರಣ ರಾಜಕೀಯದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸರ್ಕಾರದ ವಿವಿಧ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆ ನೀಡುವಾಗ ಶೇ. 4 ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತ ಸಮುದಾಯದವರಿಗೆ ಕಲ್ಪಿಸುವ ವಿಧೇಯಕ ಇದಾಗಿದೆ. ಎರಡು ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮೀಸಲಾತಿ ಸಿಗಲಿದೆ.