ದ.ಆಫ್ರಿಕಾದಲ್ಲಿ ರಣಭೀಕರ ಮಳೆ, ಪ್ರವಾಹ: 45 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಆಫ್ರಿಕಾದ ಡರ್ಬನ್ ಪ್ರದೇಶದಲ್ಲಿ ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದಾಗಿ ಕನಿಷ್ಠ 45 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರವಾಹದಲ್ಲಿ ಹಲವರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕ್ವಾಝುಲು-ನಟಾಲ್ ಪ್ರಾಂತ್ಯದ ಬಂದರು, ಪ್ರಮುಖ ಹೆದ್ದಾರಿಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಡರ್ಬನ್ ಮತ್ತು ಸುತ್ತಮುತ್ತಲಿನ ಇ-ಥೆಕ್ವಿನಿ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ದಕ್ಷಿಣ ಆಫ್ರಿಕಾದ ಮಿಲಿಟರಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.ಪ್ರವಾಹದಿಂದಾಗಿ ಅಮ್ಲಟುಜಾನಾ ನದಿಯ ದಡದಲ್ಲಿದ್ದ ಪುರಾತನ ಕಾಲದ ದೇವಾಲಯ ಸಂಪೂರ್ಣ ಕೊಚ್ಚಿಹೋಗಿದೆ. ಮನೆಗಳು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ.

ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಜನ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಮನೆಗಳಲ್ಲಿ ಸಿಲುಕಿರುವ ಜನರ ಸಹಾಯಕ್ಕಾಗಿ ಸಹಾಯವಾಣಿ ತೆರೆದಿರುವುದಾಗಿ ತುರ್ತು ಸೇವೆಗಳ ವಕ್ತಾರ ರಾಬರ್ಟ್ ಮೆಕೆಂಜಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!