ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾರ್ಯಗಳಿಗಾಗಿ ಬಿಡುಗಡೆಯಾಗಿರುವ 46,300 ಕೋಟಿ ರು. ಅನುದಾನವನ್ನು ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದಾರೆ.
ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ ಬಳಿಕ ಪಾಲಿಕೆ ಆವರಣದಲ್ಲಿ ರಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಾಲಿಕೆಯ ಆಯುಕ್ತರು ಮತ್ತು ಆಡಳಿತಾಧಿಕಾರಿಗಳು ಈ ಬೃಹತ್ ಹಗರಣದ ತನಿಖೆಯನ್ನು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಬೇಕು ಎಂದು ಒತ್ತಾಯಿಸಿದರು.
2013-14 ರಿಂದ 2023-24ರ ಅವಧಿಯಲ್ಲಿ ಕಾರ್ಯ ನಿರ್ವಹಿಸಿದ್ದ ಮುಖ್ಯ ಎಂಜಿನಿಯರ್‌ಗಳು, ಕಾರ್ಯನಿರ್ವಾಹಕ ಎಂಜಿನಿಯರ್‌ಗಳು, ಜಂಟಿ ಆಯುಕ್ತರು ಸೇರಿದಂತೆ 90 ಅಧಿಕಾರಿಗಳು ಮತ್ತು 18 ಐಎಎಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ. ಅಲ್ಲದೇ, ಹಗರಣಗಳಲ್ಲಿ ಭಾಗಿಯಾಗಿರುವ ಎಲ್ಲ ಗುತ್ತಿಗೆದಾರರ ವಿರುದ್ಧವೂ ಸಹ ದೂರು ನೀಡಲಾಗಿದೆ. ಹಗರಣ ಕುರಿತು ಸಂಪೂರ್ಣ ತನಿಖೆ ನಡೆಸಿದರೆ ಅನುದಾನ ದುರ್ಬಳಕೆ ಕುರಿತು ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.
ಕಳೆದ 10 ವರ್ಷಗಳ ಅವಧಿಯಲ್ಲಿ ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗೆಂದು ವಿವಿಧ ಅನುದಾನಗಳ ಮೂಲಕ 46,300 ಕೋಟಿ ರೂ. ಬಿಡುಗಡೆಯಾಗಿದೆ. ಈ ಬೃಹತ್ ಪ್ರಮಾಣದ ಹಣ ಎಲ್ಲಿಗೆ ಹೋಯಿತು? ಯಾರಿಗೆ ತಲುಪಿದೆ? ಎಂಬುದರ ಕುರಿತು ತನಿಖೆಯಾಗಬೇಕು. ನ್ಯಾಯ ಸಮ್ಮತ ತನಿಖೆಯಾಗಬೇಕಾದರೆ ಪ್ರಕರಣವನ್ನು ನ್ಯಾಯಾಂಗದ ತನಿಖೆ ಅಥವಾ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.