ದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ 5 ಹಸುಗಳು ಬಲಿ: ನಿಲ್ಲದ ಜನಾಕ್ರೋಶ

ಹೊಸದಿಗಂತ ವರದಿ,ಮಡಿಕೇರಿ:

ದಕ್ಷಿಣ ಕೊಡಗಿನ ಹಲವು ಕಡೆಗಳಲ್ಲಿ ಜಾನುವಾರುಗಳನ್ನು ಬಲಿ ತೆಗೆದುಕೊಂಡಿರುವ ಹುಲಿ ಸಿಸಿ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದ್ದು, ಅರಣ್ಯ ಇಲಾಖೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳ ಪ್ರಮುಖರು ಒತ್ತಾಯಿಸಿದ್ದಾರೆ.
ಕೋಣಗೇರಿ, ಬೆಳ್ಳೂರು ಹಾಗೂ ತೂಚಮಕೇರಿ ಭಾಗದಲ್ಲಿ ಹುಲಿ ದಾಳಿ ನಡೆಸಿ 5 ಹಸುಗಳನ್ನು ಕೊಂದು ಹಾಕಿತ್ತು. ಇದರಿಂದ ಆಕ್ರೋಶಗೊಂಡ ರೈತ ಸಂಘ ಪದಾಧಿಕಾರಿಗಳು, ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ತಿತಿಮತಿ ವಲಯದ ಎಸಿಎಫ್ ಉತ್ತಪ್ಪ ಹುಲಿ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರ. ಹುಲಿ ಸೆರೆಗೆ ಹಿರಿಯ ಅಧಿಕಾರಿಗಳಿಗೆ ಲಿಖಿತ ಪತ್ರ ಬರೆದು ಇಲ್ಲಿನ ವಸ್ತುಸ್ಥಿತಿಯ ಬಗ್ಗೆ ವಿವರ ನೀಡಿದ್ದಾರೆ. ಅಲ್ಲದೆ ಹುಲಿ ಸೆರೆಗೆ ಆದೇಶ ನೀಡುವಂತೆ ಕೋರಿದ್ದಾರೆ.
ಆದೇಶ ಬಂದರೆ ಸೆರೆ: ಸಿಬ್ಬಂದಿಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿ ಹುಲಿಯ ಚಲನವಲನಗಳನ್ನು ಅರಿಯಲು ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಿದ್ದರು. ಅಲ್ಲದೆ, ಹುಲಿಯ ಸೆರೆಗೆ ಬೋನನ್ನು ಅಳವಡಿಸಿ ಕ್ರಮಕ್ಕೆ ಮುಂದಾಗಿದ್ದರು. ಇದೀಗ ಇಲಾಖೆ ಅಳವಡಿಸಿದ್ದ ಕ್ಯಾಮರಾದಲ್ಲಿ ಹುಲಿಯ ಚಲನವಲನಗಳು ಸೆರೆಯಾಗಿದ್ದು, ಹುಲಿಯನ್ನು ಸೆರೆಹಿಡಿಯಲು ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಇಲಾಖೆಯ ವತಿಯಿಂದ ಕೈಗೊಳ್ಳಲಾಗಿದೆ. ಹಿರಿಯ ಅಧಿಕಾರಿಗಳ ಆದೇಶ ಪತ್ರ ಕೈ ಸೇರುತ್ತಿದ್ದಂತೆಯೇ ಹುಲಿಯ ಸೆರೆಗೆ ಕಾರ್ಯಾಚರಣೆ ನಡೆಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಈಗಾಗಲೇ ಐದು ಜಾನುವಾರುಗಳು ಹುಲಿಯ ಪಾಲಾಗಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆಯ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ರೈತ ಸಂಘದ ಕೊಡಗು ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.
ನೂತನ ವರ್ಷಾರಂಭದಲ್ಲಿ ರೈತರ 5 ಜಾನುವಾರುಗಳು ಹುಲಿಯ ಪಾಲಾಗಿದೆ. ಆದರೂ ಹುಲಿ ಸೆರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಾ ದಿನ ಕಳೆಯುತ್ತಿದ್ದಾರೆ ಎಂದು ಆರೋಪಿಸಿದೆ.
ರೈತರ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿದ ಸಂದರ್ಭ ಕೇವಲ ಪರಿಹಾರ ನೀಡಿ ತಮ್ಮ ಕರ್ತವ್ಯದಿಂದ ಜಾರಿಕೊಳ್ಳುವ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಹಸುವಿನ ಮೇಲೆ ದಾಳಿ ನಡೆದಾಗ ಹಣದ ಪರಿಹಾರದ ಬದಲು ಹಸುವನ್ನೇ ನೀಡುವಂತೆ ಆಗ್ರಹಿಸಿದ್ದಾರೆ.
ಶಾಸಕ ಕೆ.ಜಿ.ಬೋಪಯ್ಯ ಭೇಟಿ: ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೂಚಮಕೇರಿ ಗ್ರಾಮದಲ್ಲಿ ಇತ್ತೀಚೆಗೆ ಹುಲಿ ದಾಳಿಯಿಂದ ಅನೇಕ ಹಸುಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚಿಸಿದರಲ್ಲದೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹುಲಿ ದಾಳಿಯಿಂದ ಮೃತಪಟ್ಟ ಹಸುವಿನ ಮಾಲಕರಿಗೆ ಪರಿಹಾರವನ್ನು ಶೀಘ್ರ ವಿತರಿಸಬೇಕು ಮತ್ತು ದಾಳಿ ನಡೆಸಿದ ಹುಲಿಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!