ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೂಸರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 5 ಮಂದಿ ಸಾವು ಮತ್ತು 11 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.
ಬೆಳಗಾವಿ ಜಿಲ್ಲೆಯ ನಿವಾಸಿಗಳು ಕ್ರೂಸರ್ ವಾಹನದ ಮೂಲಕ ತಿರುಪತಿ ಪ್ರವಾಸ ಕೈಗೊಂಡಿದ್ದರು. ತಿಮ್ಮಪ್ಪನ ದರ್ಶನ ಪಡೆದ ಭಕ್ತಾದಿಗಳು ಹಿಂದಿರುಗುವ ವೇಳೆ ಬೆಳಗಿನ ಜಾವ ಸುಮಾರು 3.30ಕ್ಕೆ ಮಠಂಪಲ್ಲಿ ಗ್ರಾಮದ ಬಳಿ ಈ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನದಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿ 16 ಜನರು ಪ್ರಯಾಣಿಸುತ್ತಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಗಾಯಗೊಂಡಿರುವವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ತಿರುಪತಿ ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಥಂಪಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗಬಾಬು ಹೇಳಿದ್ದಾರೆ.