ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ನಾಂಪಲ್ಲಿಯಲ್ಲಿ ಸೋಮವಾರ ಸಂಭವಿಸಿದೆ.
ನಾಂಪಲ್ಲಿಯ ಬಜಾರ್ ಘಾಟ್ ನ ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೂರು ಮಂದಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಅಲ್ಲದೆ ಕಟ್ಟಡದ ಒಳಗೆ ಸಿಲುಕಿರುವ 16 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಸಾಯನಿಕ ವಸ್ತುಗಳನ್ನು ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಟ್ಟಡದ ನಾಲ್ಕೂ ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿ ಕಾರು ರಿಪೇರಿ ಮಾಡುವಾಗ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಅಲ್ಲಿದ್ದ ರಾಸಾಯನಿಕ ವಸ್ತುಗಳಿಗೆ ಬೆಂಕಿ ತಗುಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಕ್ಕೆ ವ್ಯಾಪಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.