ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಪಶ್ಚಿಮ ಬಂಗಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಖಾನೆಯನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೆ ಅಧಿಕೃತ ಸಾವಿನ ಸಂಖ್ಯೆಯನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ.