Friday, November 28, 2025

ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರು ದೆಹಲಿಗೆ ದಂಡಯಾತ್ರೆ! ಡಿಕೆಶಿಗೆ ಟಕ್ಕರ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಕುರಿತು ಕದನ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದ ಆರು ಹಿರಿಯ ಸಚಿವರು, ಗೊಂದಲ ನಿವಾರಣೆ ಮತ್ತು ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸ್ಪಷ್ಟತೆ ಪಡೆಯಲು ನಾಳೆಯೇ ದೆಹಲಿಗೆ ದಂಡಯಾತ್ರೆ ಹೊರಡಲು ಸಜ್ಜಾಗಿದ್ದಾರೆ.

ಗೃಹ ಸಚಿವ ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಈ ನಿಯೋಗವು ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಲಿದೆ. ಈ ತಂಡದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಸೇರಿದಂತೆ ಒಟ್ಟು ಆರು ಸಚಿವರು ಇರಲಿದ್ದಾರೆ ಎಂದು ತಿಳಿದುಬಂದಿದೆ.

ಪರಮೇಶ್ವರ್ ಅವರು ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚಿಸಿದ್ದು, “ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಗೊಂದಲಗಳಿವೆ. ನಾಳೆಯೇ ದೆಹಲಿಗೆ ಹೋಗಿ ಹೈಕಮಾಂಡ್‌ನಿಂದ ಕ್ಲಾರಿಟಿ ಪಡೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿ ‘ಗ್ರೀನ್‌ ಸಿಗ್ನಲ್‌’ ನೀಡಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬಣದ ನಾಯಕರು ದೆಹಲಿಗೆ ಹೋಗಿ ಬಂದಿದ್ದರು. ಇದೀಗ ಉಪ ಮುಖ್ಯಮಂತ್ರಿಗಳ ಬಣಕ್ಕೆ ಟಕ್ಕರ್ ನೀಡಲು, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕ್ಯಾಂಪ್‌ನ ಹಿರಿಯ ನಾಯಕರು ದೆಹಲಿಯತ್ತ ಮುಖ ಮಾಡಿರುವುದು ಮಹತ್ವ ಪಡೆದಿದೆ.

ಈ ನಡುವೆ, ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರು ಮಹತ್ವದ ಸಭೆ ನಡೆಸಿದ್ದಾರೆ. ಬಿಹಾರ ಚುನಾವಣಾ ಫಲಿತಾಂಶದ ವಿಶ್ಲೇಷಣೆಯ ಜೊತೆಗೆ, ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲ ಮತ್ತು ಕುರ್ಚಿ ಕದನದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ಕರೆದರೆ ಹೋಗುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಸಚಿವರ ನಿಯೋಗವೇ ದೆಹಲಿಗೆ ಹೊರಟಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

error: Content is protected !!