ಹೊಸದಿಗಂತ ವರದಿ, ಮಂಗಳೂರು
ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಭಾನುವಾರ ಆರಂಭಗೊಂಡ ರಾಜ್ಯ ಮಟ್ಟದ 67ನೇಯ ಅಖಿಲ ಭಾರತ ಸಹಕಾರ ಸಪ್ತಾಹಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸಹಕಾರ ಇದ್ದಲ್ಲಿ ಮಾತ್ರ ಸಹಕಾರಿ ಕ್ಷೇತ್ರ ಬೆಳೆಯಲು ಸಾಧ್ಯ. ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳು ಒಗ್ಗಟ್ಟಾಗಿ ಮತ್ತು ಬಲಿಷ್ಠವಾಗಿ ಬೆಳೆಯುತ್ತಿವೆ. ಸಾಲ ಸೌಲಭ್ಯ ನೀಡುವಲ್ಲಿ ಸಹಕಾರಿ ಬ್ಯಾಂಕುಗಳು ನಂಬರ್ ಒನ್ ಆಗಿದೆ ಎಂದರು.
ಆತ್ಮ ನಿರ್ಭರ ಯೋಜನೆಯಡಿ ರಾಜ್ಯಕ್ಕೆ ಮೀಸಲಿಟ್ಟ ಅನುದಾನದಲ್ಲಿ ಸಹಕಾರಿ ಕ್ಷೇತ್ರಕೆ 600 ಕೋಟಿ ಒದಗಿಸಬೇಕು ಎಂದು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಈ ಅನುದಾನ ಶೀಘ್ರ ದೊರೆಯುತ್ತೆ ಎಂಬ ಭರವಸೆ ಇದೆ ಎಂದವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮಾತನಾಡಿ, ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಸಹಕಾರ ಅಧ್ಯಯನ ಪೀಠ ಆರಂಭಿಸಲು ಸರಕಾರದಿಂದ ಅನುಮತಿ ದೊರಕಿದ್ದು, ಈ ವರ್ಷದಿಂದಲೇ ಆರಂಭಗೊಳ್ಳಲಿದೆ. ಇದು ಹೆಮ್ಮೆಯ ವಿಷಯ ಎಂದರು.
ಇದೇ ಸಂದರ್ಭ ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆಗೊಂಡಿತು. ಅಲ್ಲದೆ ಉತ್ತಮ ನವೋದಯ ಸ್ವ ಸಹಾಯ ಸಂಘಗಳನ್ನು ಪುರಸ್ಕರಿಸಲಾಯಿತು. ಕಾರ್ಯಕ್ರಮಕ್ಕೆ ಮುನ್ನ ನಡೆದ ಸಹಕಾರ ಜಾಥಾಕ್ಕೆ ಎಸ್ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಚಾಲನೆ ನೀಡಿದರು. ಮೇಯರ್ ದಿವಾಕರ ಪಾಂಡೇಶ್ವರ ಸಹಕಾರ ಸಂಘಗಳ ಮಳಿಗೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರಾದ ಯು.ಟಿ.ಖಾದರ್, ವೇದವ್ಯಾಸ ಕಾಮತ್, ಮೀನು ಮಾರಾಟ ಮಹಾ ಮಂಡಳದ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಕೆಎಂಎಫ್ ಅಧ್ಯಕ್ಷ ರವಿರಾಜ ಹೆಗ್ಡೆ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ ಮತ್ತಿತರರು ಉಪಸ್ಥಿತರಿದ್ದರು.