6ನೇ ತರಗತಿ ಸಾಮಾನ್ಯ ಪ್ರವೇಶ ಪರೀಕ್ಷೆ : ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಮಾ.12 ರಂದು ನಡೆಯುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘಗಳ 6 ನೇ ತರಗತಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಆದೇಶಿಸಿದ್ದಾರೆ.

ಮಡಿಕೇರಿ, ವೀರಾಜಪೇಟೆ, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಹಾಗೂ ಸೋಮವಾರಪೇಟೆ ಸಂತ ಜೋಸೆಫರ ಸಂಯುಕ್ತ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿರುವ ಅವರು, ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಲಾಗಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಯಾವುದೇ ನಿಯಮಬಾಹಿತ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಕಂಪ್ಯೂಟರ್ ಮತ್ತು ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಈ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!