ಹೊಸದಿಗಂತ ಡಿಜಿಟಲ್ ಡೆಸ್ಕ್
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಭಾಕರಪೇಟ್ ಘಾಟ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದು, 45 ಜನರು ಗಾಯಗೊಂಡಿದ್ದಾರೆ.
ತಿರುಪತಿಯಿಂದ 25 ಕಿಮೀ ದೂರದಲ್ಲಿರುವ ಬಕ್ರಪೇಟಾದಲ್ಲಿ ಈ ಅಪಘಾತ ಸಂಭವಿಸಿದೆ. ಭಾನುವಾರ ಬೆಳಗ್ಗೆ ಆಯೋಜನೆಯಾಗಿದ್ದ ಮದುವೆ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದ 50 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ಅನಂತಪುರ ಜಿಲ್ಲೆಯ ಧರ್ಮಾವರಂನಿಂದ ತಿರುಪತಿಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ 100 ಅಡಿ ಆಳದ ಕಣಿವೆಗೆ ಉರುಳಿದೆ. ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿರುಪತಿ ಎಸ್ಪಿ ತಿಳಿಸಿದ್ದಾರೆ. ಗಾಯಾಳುಗಳನ್ನು ತಿರುಪತಿಯ ಶ್ರೀ ವೆಂಕಟೇಶ್ವರ ರಾಮಚಂದ್ರ ರೂಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ತಿರುಪತಿಯಿಂದ ವೈದ್ಯಕೀಯ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಆಂಧ್ರ ಸರ್ಕಾರ 2 ಲಕ್ಷ ಪರಿಹಾರ ಘೋಷಿಸಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ