ಹೊಸದಿಗಂತ ವರದಿ ಉತ್ತರಕನ್ನಡ:
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.
ಅವರು ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಭೂ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಮಟಾದಲ್ಲಿ ಮಾತನಾಡಿದರು. ರಾಜ್ಯದ 6 ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ತೀವ್ರವಾಗಿದ್ದು, ಈ ಭಾಗದಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಗಾಗಿ 500 ಕೋಟಿ ಮೀಸಲಿಡಲಾಗುತ್ತಿದೆ ಎಂದರು.
ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲು ಕೊರೆತ ಸಮಸ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೂರು ಕೋಟಿಯಂತೆ 300 ಕೋಟಿ ಒದಗಿಸಲಾಗುವುದು, ತಡೆಗೋಡೆ ನಿರ್ಮಾಣ ಸೇರಿದಂತೆ ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆಯಾಗಲು ವಿಳಂಬವಾಗಿದೆ. ಈ ಕುರಿತಂತೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರದ ಅನುದಾನ ಬಿಡುಗಡೆ ವಿಳಂಬವಾಗಿರುವುದರಿಂದ ತಡೆಗೋಡೆ ಹಾಗೂ ಪ್ರಕೃತಿ ವಿಕೋಪದ ಕಾಮಗಾರಿ ನಡೆಸಲು ವಿಳಂಬವಾಗಿದೆ ಎಂದರು.
ಕಂದಾಯ ಸಚಿವರು ಶಿರಸಿ ತಾಲ್ಲೂಕಿನ ಬೆಣ್ಣೆಹೊಳೆ ಸೇತುವೆ, ಭೂಕುಸಿತ ಸಂಭವಿಸಿರುವ ಕುಮಟಾ ತಾಲ್ಲೂಕಿನ ದೇವಿಮನೆ ಘಟ್ಟ ಪ್ರದೇಶದಲ್ಲಿ ಪರಿಶೀಲನೆ ನಡೆಸಿದರು. ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕೆ ಆರ್.ಎನ್.ಎಸ್ ಇನ್‌ಫ್ರಾಸ್ಟ್ರಕ್ಟರ್ ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯ ಮತ್ತಿತರರು ಉಪಸ್ಥಿತರಿದ್ದರು.