November 22, 2026
Sunday, November 22, 2026
spot_img

ರಾಜಸ್ಥಾನ ರಸ್ತೆ ದುರಂತದಲ್ಲಿ 9 ಮಂದಿ ಬ*ಲಿ: ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50,000 ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಹಂಚಿಕೊಂಡಿದೆ. “ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿರುವುದು ಅತೀವ ನೋವು ತಂದಿದೆ. ಈ ದುಃಖದ ಸಮಯದಲ್ಲಿ ನನ್ನ ಸಂತಾಪಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ಇತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರೂ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

ಮೂರು ವಾಹನಗಳಲ್ಲಿ ಹೊರಟಿದ್ದ 36 ಸಂಬಂಧಿಕರು

ಖಾಟು ಶ್ಯಾಮ್ ದೇಗುಲದ ದರ್ಶನ ಮುಗಿಸಿ ಧಾರ್ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಮರಳುತ್ತಿದ್ದಾಗ ಕೋಟಾ-ಉದಯಪುರ ಹೆದ್ದಾರಿಯ ಶಂಭುಪುರ ಬಳಿ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಘಟನೆಯ ಬಗ್ಗೆ ಕಣ್ಣೀರಿಡುತ್ತಾ ವಿವರಿಸಿದ ಸಂತ್ರಸ್ತರೊಬ್ಬರು, “ನಾವು ಒಂದೇ ಕುಟುಂಬದ 36 ಮಂದಿ ಸಂಬಂಧಿಕರು ಮೂರು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದೆವು. ನಮ್ಮ ಎರಡು ವಾಹನಗಳು ಹಿಂದೆ ಉಳಿದಿದ್ದವು, ಆದರೆ 16 ಜನರಿದ್ದ ಅವರ ವಾಹನ ಮುಂದೆ ಸಾಗಿತ್ತು. ಅಷ್ಟರಲ್ಲಿ ಸಹೋದರಿಯಿಂದ ಅಪಘಾತವಾದ ಬಗ್ಗೆ ಫೋನ್ ಕರೆ ಬಂತು. ತಕ್ಷಣವೇ ನಾವು ಸ್ಥಳಕ್ಕೆ ಧಾವಿಸಿದೆವು” ಎಂದು ಆಘಾತಕಾರಿ ಕ್ಷಣಗಳನ್ನು ನೆನೆದಿದ್ದಾರೆ.

ಸದ್ಯ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಮೊದಲ ಆದ್ಯತೆ ನೀಡಲಾಗಿದ್ದು, ಮೃತಪಟ್ಟವರ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜೇಶ್ ಜೋಶಿ ಮಾಹಿತಿ ನೀಡಿದ್ದಾರೆ.

Must Read

Skip to toolbar