ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿರುವ ಜಂತರ್ ಮಂತರ್ಗೆ ಅಕ್ರಮ ಪ್ರವೇಶ ಮಾಡಿ ಬಾಂಡ್ ಷರತ್ತನ್ನು ಉಲ್ಲಂಘನೆ ಮಾಡಿರುವ ಕಾಕ್ರೋಚ್ ಜನತಾ ಪಾರ್ಟಿಯ ಮುಖಂಡರಾದ ಸೌರವ್ ದಾಸ್ ಹಾಗೂ ಅಶುತೋಷ್ ರಾಂಕಾ ಅವರನ್ನು ಪೊಲೀಸರು ಐದು ದಿನಗಳ ಕಾಲ ತಿಹಾರ್ ಜೈಲಿಗೆ ಕಳುಹಿಸಿದ್ದಾರೆ.
ಬುಧವಾರ ಈ ಮೂವರನ್ನು ಸ್ಪೆಷಲ್ ಎಕ್ಸ್ಕ್ಯೂಟಿವ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತು. ಅಗತ್ಯ ಬಾಂಡ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅಜಿಂಕ್ಯ ಶಿಂಧೆ ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ದಾಸ್ ಹಾಗೂ ರಾಂಕಾ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಈ ವೇಳೆ ಒಂದು ವರ್ಷದವರೆಗೂ ಶಾಂತಿ ಕದಡುವಂತಹ ಕೆಲಸಗಳನ್ನು ಮಾಡಬಾರದು ಎಂದು ಬಾಂಡ್ಗೆ ಸಹಿ ಹಾಕಿದ್ದರು.
ಆದರೆ ರಿಲೀಸ್ ಆದ ಮರುದಿನವೇ ನಿರ್ಬಂಧಿತ ಜಂತರ್ ಮಂತರ್ಗೆ ಪ್ರವೇಶಿಸಿ ಪ್ರತಿಭಟನೆ ನಡೆಸಿದ್ದಾರೆ. ನಿಷೇಧಾಜ್ಞೆ ಉಲ್ಲಂಘನೆ, ಶಾಂತಿ ಬಾಂಡ್ ಷರತ್ತುಗಳ ಉಲ್ಲಂಘನೆ, ಕರ್ತವ್ಯನಿರತ ಸರ್ಕಾರಿ ಸಿಬ್ಬಂದಿಯ ಕೆಲಸಕ್ಕೆ ಅಡ್ಡಿ ಹಾಗೂ ಅಕ್ರಮ ಪ್ರವೇಶ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಸಿಜೆಪಿ ಕಾನೂನು ಘಟಕದ ಮುಖ್ಯಸ್ಥೆ ರತ್ನಾ ಸಿಂಗ್, ಮುಖಂಡರನ್ನು ಮುಂಜಾನೆ 3:00 ಗಂಟೆಗೆ ಖಾಸಗಿ ವ್ಯಾನ್ನಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆತರಲಾಗಿತ್ತು ಮತ್ತು ತಡರಾತ್ರಿಯವರೆಗೂ ವಕೀಲರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.



