October 14, 2026
Wednesday, October 14, 2026
spot_img

ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹ: ಎರಡನೇ ದಿನವೂ ಹೆದ್ದಾರಿ ಬಂದ್, ಸರ್ಕಾರಕ್ಕೆ ರೈತರ ಎಚ್ಚರಿಕೆ

ಹೊಸದಿಗಂತ ವರದಿ ಬೆಳಗಾವಿ

ಕಬ್ಬಿನ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಿಂದ ಬೆಳಗಾವಿ ಜಿಲ್ಲೆಯ ಹತ್ತರಗಿವರೆಗೆ ರೈತರು ನಡೆಸುತ್ತಿರುವ ಹೆದ್ದಾರಿ ಬಂದ್ ಪ್ರತಿಭಟನೆ ಎರಡನೇ ದಿನವೂ ತೀವ್ರಗೊಂಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿರುವ ರೈತ ಮುಖಂಡರು, ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಹತ್ತರಗಿ ಟೋಲ್‌ಗೇಟ್‌ ಬಳಿ ಕಬ್ಬು ಬೆಳೆಗಾರರ ಹಾಗೂ ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಕೂಡಲೇ ಮಧ್ಯಪ್ರವೇಶಿಸಿ ರೈತರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಪೂಜಾರಿ ಆಗ್ರಹಿಸಿದರು.

ಸಕ್ಕರೆಗೆ ಪ್ರತಿ ಕಿಲೋಗ್ರಾಂಗೆ 65 ರೂಪಾಯಿ ಬೆಲೆ ನಿಗದಿಪಡಿಸಿ ರಶೀದಿ ನೀಡುವವರೆಗೆ ಕಾರ್ಖಾನೆಗಳಿಂದ ಒಂದು ಕೆಜಿ ಸಕ್ಕರೆಯನ್ನೂ ಹೊರಹೋಗಲು ಬಿಡುವುದಿಲ್ಲ ಎಂದು ಅವರು ಎಚ್ಚರಿಸಿದರು. ಎಂಎಸ್ಪಿ 60 ರೂಪಾಯಿಗೆ ಹೆಚ್ಚಿಸುವುದು ಹಾಗೂ ಎಥೆನಾಲ್ ಖರೀದಿಗೆ ಭರವಸೆ ನೀಡುವುದು ಸೇರಿದಂತೆ ಬೇಡಿಕೆಗಳು ಈಡೇರುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಗತ್ಯ ಬಿದ್ದರೆ ರೈತರ ಜಮೀನುಗಳ ಮೂಲಕ ಹಾದುಹೋಗಿರುವ ರೈಲು ಮಾರ್ಗಗಳನ್ನೂ ಬಂದ್ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳದಲ್ಲಿ ಮಾತನಾಡಿದ ಮಹಾರಾಷ್ಟ್ರದ ಕೃಷಿ ಮುಖಂಡ ರಾಜು ಶೆಟ್ಟಿ, ಕಳೆದ 24 ಗಂಟೆಗಳಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದ್ದರೂ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.

ಹೆದ್ದಾರಿ ಬಂದ್‌ನಿಂದ ಪ್ರಯಾಣಿಕರು ಹಾಗೂ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಸಿಲುಕಿರುವ ಲಾರಿ ಚಾಲಕರು ಮತ್ತು ನಿರ್ವಾಹಕರಿಗೆ ಊಟದ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ:

ರೈತ ಮುಖಂಡ ಶಶಿಕಾಂತ್ ಗೂರೂಜಿ ಮಾತನಾಡಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಭೆ ನಡೆಸಿ ಕಬ್ಬಿನ ಬೆಂಬಲ ಬೆಲೆ ಕುರಿತು ಚರ್ಚಿಸಬೇಕು ಎಂದು ಆಗ್ರಹಿಸಿದರು. ಸಭೆಯ ನಿರ್ಧಾರವನ್ನು ಜಿಲ್ಲಾಡಳಿತದ ಮೂಲಕ ರೈತರಿಗೆ ತಿಳಿಸಬೇಕು ಎಂದರು.

ಬುಧವಾರ ಸಂಜೆ 6 ಗಂಟೆಗೆ ರೈತ ಮುಖಂಡರು ಸಭೆ ಸೇರಿ ಮುಂದಿನ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಿದ್ದಾರೆ. ಸರ್ಕಾರ ಸೂಕ್ತ ಸ್ಪಂದನೆ ನೀಡದಿದ್ದರೆ ಪ್ರತಿಭಟನೆ ನಿರಂತರವಾಗಿ ಮುಂದುವರಿಯಲಿದೆ ಎಂದು ಮುಖಂಡರು ಎಚ್ಚರಿಸಿದ್ದಾರೆ.

Must Read