ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ವಾರ್ಷಿಕ ನವರಾತ್ರಿ ಬ್ರಹ್ಮೋತ್ಸವಗಳು ಭಕ್ತಿಭಾವದಿಂದ ನಡೆಯುತ್ತಿದ್ದು, ಉತ್ಸವದ ಪ್ರಮುಖ ಆಕರ್ಷಣೆಯಾದ ಗರುಡ ಸೇವೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.
ಇಂದು ಸಂಜೆ ಗರುಡ ಸೇವೆ
ಶುಕ್ರವಾರ, ಅಕ್ಟೋಬರ್ 16ರಂದು ಸಂಜೆ 6.30ಕ್ಕೆ ಗರುಡ ಸೇವೆ ಜರುಗಲಿದೆ. ಈ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ, ಭದ್ರತೆ ಮತ್ತು ಸುಗಮ ಸಂಚಾರಕ್ಕೆ ಒತ್ತು ನೀಡಿ ತಿರುಮಲದ ಎರಡೂ ಘಾಟ್ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ಮಾಹಿತಿ ಪ್ರಕಾರ, ಅಕ್ಟೋಬರ್ 15ರ ಗುರುವಾರ ರಾತ್ರಿ 9 ಗಂಟೆಯಿಂದ ಅಕ್ಟೋಬರ್ 17ರ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ಎರಡೂ ಘಾಟ್ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಿಗೆ ಅವಕಾಶವಿರುವುದಿಲ್ಲ. ಗರುಡ ವಾಹನ ಸೇವೆಯ ಸಂದರ್ಭದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿಯಿಂದ ವಿಶೇಷ ಸಲಹೆ
ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ತಿರುಮಲದಲ್ಲಿ ವಾಹನ ನಿಲುಗಡೆಗೆ ಸ್ಥಳಾವಕಾಶದ ಕೊರತೆಯೂ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತಿರುಪತಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಗರುಡ ಸೇವೆಗೆ ಆಗಮಿಸುವ ಭಕ್ತರಿಗೆ ವಿಶೇಷ ಸಲಹೆಯೊಂದನ್ನು ನೀಡಿದ್ದಾರೆ. ಭಕ್ತರು ತಮ್ಮ ವಾಹನಗಳನ್ನು ತಿರುಪತಿಯಲ್ಲಿ ಗುರುತಿಸಿರುವ ನಿಗದಿತ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿ, ಅಲ್ಲಿಂದ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳ ಮೂಲಕ ತಿರುಮಲಕ್ಕೆ ತೆರಳುವಂತೆ ಸೂಚಿಸಿದ್ದಾರೆ.



