ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಯ ಸಂಭ್ರಮ ದುರಂತದಲ್ಲಿ ಅಂತ್ಯಗೊಂಡಿದೆ. ಚೋರ್ಬಾಗನ್ ಸರ್ಬಜನಿನ್ ದುರ್ಗಾ ಪೂಜಾ ಮಂಟಪದ ಬಳಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 19 ಮಂದಿ ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ
ಭಾನುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮೃತರಲ್ಲಿ 17 ಮಂದಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಸಂತ್ರಸ್ತ ಕುಟುಂಬಗಳಿಗೆ ನೆರವು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಮೃತರ ಕುಟುಂಬಕ್ಕೆ 25 ಲಕ್ಷ ರೂ, ಸರ್ಕಾರಿ ಉದ್ಯೋಗ
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರದ ಜೊತೆಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಗಾಯಗೊಂಡವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುತ್ತದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಇದಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಮುಂದೂಡಿ, ಗಾಯಾಳುಗಳನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ.
ಭಾರೀ ಜನಸಂದಣಿ, ಮಳೆಯಿಂದ ಹೆಚ್ಚಿದ ಆತಂಕ
ಗಿರೀಶ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಸರದಾ ಪಾರ್ಕ್ನಲ್ಲಿರುವ ಪೂಜಾ ಮಂಟಪದ ನಿರ್ಗಮನ ದ್ವಾರದ ಬಳಿ ಶನಿವಾರ ಸಂಜೆ ಸುಮಾರು 7.40ರ ವೇಳೆಗೆ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಮಂಟಪಕ್ಕೆ ಭೇಟಿ ನೀಡಿದ್ದ ಜನರ ಭಾರೀ ನೂಕುನುಗ್ಗಲು, ಹಠಾತ್ ಸುರಿದ ಮಳೆ ಹಾಗೂ ಜನಸಂದಣಿ ನಿರ್ವಹಣೆಯಲ್ಲಿನ ಲೋಪಗಳು ಅವ್ಯವಸ್ಥೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ.
ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ವಿಪತ್ತು ನಿರ್ವಹಣಾ ತಂಡಗಳು ಮತ್ತು ಆಂಬುಲೆನ್ಸ್ಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಮಂಟಪಕ್ಕೆ ಸಾರ್ವಜನಿಕರ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದೆ.



