October 19, 2026
Monday, October 19, 2026
spot_img

WEATHER | ರಾಜ್ಯಾದ್ಯಂತ ವರುಣಾರ್ಭಟ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ಮಳೆ ಮತ್ತೆ ಚುರುಕುಗೊಳ್ಳಲಿದ್ದು, ಭಾರತೀಯ ಹವಾಮಾನ ಇಲಾಖೆ ಪ್ರಮುಖ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೆ ಹಾಗೂ ಕರಾವಳಿ ಭಾಗದಲ್ಲಿ ಅಕ್ಟೋಬರ್ 20ರಿಂದ 22ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಅಕ್ಟೋಬರ್ 20ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗಲಿದ್ದು, ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದರೆ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ.

ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಅಕ್ಟೋಬರ್ 24ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

Must Read