October 24, 2026
Saturday, October 24, 2026
spot_img

WEATHER | ರಾಜ್ಯದಲ್ಲಿ ಮುಂಗಾರು-ಹಿಂಗಾರು ಸಕ್ರಿಯ: ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಪ್ರಸ್ತುತ ಮುಂಗಾರು ಮತ್ತು ಹಿಂಗಾರು ಮಳೆಯ ವಾತಾವರಣ ಒಂದೇ ಬಾರಿಗೆ ಸಕ್ರಿಯಗೊಂಡಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಇಂದಿನಿಂದ ವಾತಾವರಣದಲ್ಲಿ ಬದಲಾವಣೆಗಳು ಕಂಡುಬರಲಿವೆ. ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಮತ್ತು ರೈತರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಕರಾವಳಿ ನಿವಾಸಿಗಳು ಹಾಗೂ ಮೀನುಗಾರರು ಸಮುದ್ರಕ್ಕಿಳಿಯುವ ಮುನ್ನ ಜಾಗರೂಕರಾಗಿರಲು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನವೇ ಮುಂದುವರಿಯಲಿದೆ.

ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಸಿಡಿಲು ಹಾಗೂ ಬಿರುಗಾಳಿಯ ಮುನ್ನೆಚ್ಚರಿಕೆ ಇರುವುದರಿಂದ ತೆರೆದ ಪ್ರದೇಶಗಳಲ್ಲಿ, ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲದಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

Must Read