October 24, 2026
Saturday, October 24, 2026
spot_img

ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಕ್ಟೋಬರ್ 26ರಂದು ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಪೂರಕವಾದ ನಿರ್ಧಾರ ಕೈಗೊಳ್ಳದಿದ್ದರೆ, ಅಕ್ಟೋಬರ್ 27ರಂದು ಕರ್ನಾಟಕ ಬಂದ್ ಗೆ ಕರೆ ನೀಡಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಎಚ್ಚರಿಕೆ ನೀಡಿದರು.

ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 1,000 ಹೆಚ್ಚುವರಿ ಬೆಂಬಲ ಬೆಲೆಯಾಗಿ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಘೋಷಿಸಬೇಕು. ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಟನ್ ಕಬ್ಬಿಗೆ 4,500 ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿ ಪ್ರಮಾಣದಲ್ಲಿನ ಅಕ್ರಮ ತಡೆಗೆ ಸರ್ಕಾರ 500 ಕೋಟಿ ಮೀಸಲಿಡಬೇಕು. ರಿಕವರಿ ಪ್ರಮಾಣದಲ್ಲಿನ ವಂಚನೆ ತಡೆಯಲು ಸ್ಯಾಂಪ್ಲರ್ ಯಂತ್ರಗಳು ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಅಳವಡಿಸಬೇಕು ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದು ರೈತರ ಸಮಸ್ಯೆಗಳನ್ನು ಚರ್ಚಿಸಬೇಕು. ಸಕ್ಕರೆಯ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ 50ಕ್ಕೆ ನಿಗದಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬೆಳಗಾವಿಯ ಶುಗರ್ ಕಮಿಷನರ್ ಕಚೇರಿಗೆ ಹೆಚ್ಚುವರಿ ಆಯುಕ್ತರನ್ನು ನೇಮಿಸಿ, ಪರಿಶೀಲನಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಬೇಕು. ರೈತರಿಗೆ ನ್ಯಾಯಯುತ ಬೆಲೆ ದೊರೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಪೂಜಾರಿ ಆಗ್ರಹಿಸಿದರು.

Must Read