ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ರಾಜ್ಯದ ಹಲವೆಡೆ ಮಧ್ಯಾಹ್ನದಿಂದ ರಾತ್ರಿ ವೇಳೆ ಮಳೆ ಸುರಿಯುವ ಸಾಧ್ಯತೆಯಿದೆ.
ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ
ಮಲೆನಾಡಿನ ಕೊಡಗು ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ. ಇದರೊಂದಿಗೆ ಹಾಸನ ಜಿಲ್ಲೆಯ ಸಕಲೇಶಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದರೊಂದಿಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ. ರಾತ್ರಿ ವೇಳೆ ತಂಪಾದ ಗಾಳಿ ಮತ್ತು ಮಳೆಯ ಅನುಭವ ಜನರಿಗೆ ಸಿಗಲಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಆಯ್ದ ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.



