October 28, 2026
Wednesday, October 28, 2026
spot_img

ಮತದಾರರ ಪಟ್ಟಿ ಪರಿಷ್ಕರಣೆ ಕಾನೂನುಬದ್ಧ: ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದ ಅಶ್ವತ್ಥನಾರಾಯಣ

ಹೊಸದಿಗಂತ ವರದಿ ಬೆಳಗಾವಿ:

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕಾನೂನುಬದ್ಧವಾಗಿ ನಡೆದಿದ್ದು, ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬುಧವಾರ ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಮತದಾರರ ಪಟ್ಟಿಯಲ್ಲಿನ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ಎಸ್ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಪ್ರತಿಯೊಬ್ಬ ಮತದಾರರ ಮ್ಯಾಪಿಂಗ್ ಮಾಡಿ, ನಿಯಮಾನುಸಾರ ಗಣತಿ ನಮೂನೆಗಳನ್ನು ನೀಡಿ ಮಾಹಿತಿ ಸಂಗ್ರಹಿಸಲಾಗಿದೆ ಎಂದರು.

ಇವಿಎಂ ಮತ್ತು ಎಸ್ಐಆರ್ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಪ್ರತಿ ಚುನಾವಣೆಯಲ್ಲೂ ಅಕ್ರಮದ ದೂರು ನೀಡುವ ಕಾಂಗ್ರೆಸ್, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ. ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಪಕ್ಷದೊಳಗೆ ಕಿತ್ತಾಟ ನಡೆಯುತ್ತಿದೆ. ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 170 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಕ್ಷ್ಯಾಧಾರಗಳಿಲ್ಲದೆ ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಡಿ ಜಿಲ್ಲೆ ಹಾಗೂ ವಿವಿಧ ಹಂತಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ರಾಜ್ಯದಲ್ಲಿನ ಸ್ಟಿಂಗ್ ಆಪರೇಷನ್ ವಿಚಾರ:

 ಸ್ಟಿಂಗ್ ಆಪರೇಷನ್ ಈ ಕಾರ್ಯಾಚರಣೆ ನಡೆದಿದೆಯೇ ಅಥವಾ ಇಲ್ಲವೇ ಎಂಬುದು ತನಿಖೆಯಿಂದ ಸ್ಪಷ್ಟವಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಯತೀಂದ್ರ ಅವರೇ ಕಾಂಗ್ರೆಸ್ ನಾಯಕರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ರಾಜಮನೆತನದ ಕೊಡುಗೆಯನ್ನು ಸ್ಮರಿಸಿದ ಅವರು, ಸರ್ಕಾರದ ಸಚಿವರು ರಾಜಮನೆತನದ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ಸರ್ಕಾರ ಕೂಡಲೇ ರಾಜಮನೆತನವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೌರವದಿಂದ ನಡೆದುಕೊಳ್ಳಬೇಕು ಎಂದರು.

ಇದನ್ನೂ ಓದಿ:

ಕಬ್ಬು ಬೆಳೆಗಾರರಿಗೆ ನೆರವಾಗಿಲ್ಲ:

ರಾಜ್ಯಸಭೆಯ ಮಾಜಿ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಚನ್ನಮ್ಮನ ಕಿತ್ತೂರು ಮತ್ತು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಬ್ಬು ಬೆಳೆಗಾರರ ಸಭೆ ನಡೆಸಿದ್ದು, ನೈಜ ಪರಿಹಾರ ನೀಡುವ ಬದಲು ಕಣ್ಣೊರೆಸುವ ತಂತ್ರ ಅನುಸರಿಸಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸಲಹಾ ಬೆಲೆ (ಎಸ್ಎಪಿ) ಘೋಷಿಸುವ ಅವಕಾಶವಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರು. ಅ.29ರಂದು ಕೇಂದ್ರ ಸರ್ಕಾರದ ಸಮಿತಿಯು ರಾಜ್ಯಕ್ಕೆ ಭೇಟಿ ನೀಡಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತರನ್ನು ಭೇಟಿಯಾಗಲಿದೆ ಎಂದು ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧ್ಯಕ್ಷ ಸುಭಾಶ್ ಪಾಟೀಲ, ಗೀತಾ ಸುತಾರ, ಉಪಮೇಯರ್ ಹನಮಂತ ಕೊಂಗಾಲಿ, ಡಾ.ರವಿ ಪಾಟೀಲ, ಮಾಜಿ ಶಾಸಕ ಅನಿಲ್ ಬೆನಕೆ, ಸೇರಿದಂತೆ ಬಿಜೆಪಿ ಮುಕಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Must Read