ಹೊಸ ದಿಗಂತ ವರದಿ, ಅಂಕೋಲಾ:
ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟು 9 ಜನರು ತೀವ್ರವಾಗಿ ಗಾಯಗೊಂಡ ಘಟನೆ ತಾಲೂಕಿನ ಅಡ್ಲೂರ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಸಂಭವಿಸಿದೆ.
ಮಕ್ಕಿಗದ್ದೆಯಿಂದ ಅಂಕೋಲಾ ಕಡೆ ಬರುತ್ತಿದ್ದ ಬಸ್ ಮತ್ತು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು ಟ್ಯಾಂಕರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ತಾಲೂಕಿನ ಕೇಣಿಯ ಭಾಸ್ಕರ ಗಾಂವಕರ್ ಎನ್ನುವವರು ಸಹ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಒಂಬತ್ತು ಜನ ಪ್ರಯಾಣಿಕರು ಸಹ ತೀವ್ರವಾಗಿ ಗಾಯಗೊಂಡಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಲಾರಿ ಚಾಲಕ ಎದುರಿನಿಂದ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸಿಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ಜಜ್ಜಿ ಹೋಗಿ ರಸ್ತೆಯಲ್ಲಿ ಪಲ್ಟಿಯಾಗಿದ್ದು ಲಾರಿಯ ಮುಂಭಾಗ ಸಹ ಸಂಪೂರ್ಣ ಜಜ್ಜಿ ಹೋಗಿ ಚಾಲಕನ ಮೃತದೇಹ ಲಾರಿಯಲ್ಲಿ ಸಿಲುಕಿಕೊಂಡಿದೆ.
ಬಸ್ ಚಾಲಕನ ಕಾಲು ತುಂಡಾಗಿದ್ದು ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಗಾಯಾಳುಗಳಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕಾರವಾರ ಜಿಲ್ವಾ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.