October 30, 2026
Friday, October 30, 2026
spot_img

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ಪತನ: ಕ್ಯಾಪ್ಟನ್ ಸೇರಿ ಆರು ಮಂದಿಯ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೇವರ ದರ್ಶನ ಮುಗಿಸಿ ತವರಿಗೆ ಮರಳುವ ನಿರೀಕ್ಷೆಯಲ್ಲಿದ್ದ ಕನ್ನಡಿಗರ ಪ್ರವಾಸ ದುರಂತದಲ್ಲಿ ಅಂತ್ಯಗೊಂಡಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪದ ಹಥಿ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಪೈಲಟ್ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಐವರು ಕನ್ನಡಿಗರಿದ್ದು, ಮೃತದೇಹಗಳು ಪತ್ತೆಯಾಗಿವೆ ಎಂದು ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಸುರ್ಜಿತ್ ಸಿಂಗ್ ಪವಾರ್ ತಿಳಿಸಿದ್ದಾರೆ.

ಬದ್ರಿನಾಥದಿಂದ ಡೆಹ್ರಾಡೂನ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್

ಬದ್ರಿನಾಥದಿಂದ ಡೆಹ್ರಾಡೂನ್‌ಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗುಡ್ಡಗಾಡು ಪ್ರದೇಶದಲ್ಲಿ ಪತನಗೊಂಡಿದೆ. ಘಟನೆಯಲ್ಲಿ ಮೃತಪಟ್ಟವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜೋಶಿಮಠಕ್ಕೆ ಸ್ಥಳಾಂತರಿಸಲಾಗುತ್ತಿದೆ. ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಉತ್ತರಾಖಂಡ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಮೃತರಲ್ಲಿ ಪೊಲೀಸ್ ಅಧಿಕಾರಿ, ವಕೀಲರು ಮತ್ತು ಉದ್ಯಮಿಗಳು

ದುರಂತದಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಲಂಕೆ, ವಕೀಲರಾದ ಕೆ. ಸುಧೀರ್ ಮತ್ತು ಶಂಕರೇಗೌಡ, ಉದ್ಯಮಿಗಳಾದ ಪ್ರತಾಪ್ ಹಾಗೂ ಎಚ್.ಎಸ್. ನಟರಾಜ್ ಮೃತಪಟ್ಟಿದ್ದಾರೆ. ಇವರೊಂದಿಗೆ ಹೆಲಿಕಾಪ್ಟರ್ ಕ್ಯಾಪ್ಟನ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಅರುಣ್ ಸಾಲಂಕೆ 2007ನೇ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾಗಿದ್ದು, ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ ಗ್ರಾಮದವರು. ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಿದ್ದರು.

ಇದನ್ನೂ ಓದಿ:

ಹಾಸನ ಜಿಲ್ಲೆಯ ಸಕಲೇಶಪುರದ ಬಾಚಿಹಳ್ಳಿ ಮೂಲದ ಪ್ರತಾಪ್ ಉದ್ಯಮಿಯಾಗಿದ್ದು, ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳಲ್ಲೂ ಗುರುತಿಸಿಕೊಂಡಿದ್ದರು. ನಟರಾಜ್ ಹಾಗೂ ಶಂಕರೇಗೌಡ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದವರು. ಅರುಣ್ ಅವರೊಂದಿಗೆ ಹಳೆಯ ಸ್ನೇಹ ಹೊಂದಿದ್ದರು. ವಕೀಲ ಕೆ. ಸುಧೀರ್ ಕೂಡ ಸ್ನೇಹಿತರ ಬಳಗದ ಸದಸ್ಯರಾಗಿದ್ದರು.

ಮೃತದೇಹಗಳನ್ನು ಕರ್ನಾಟಕಕ್ಕೆ ತರಲು ಅಧಿಕಾರಿಗಳೊಂದಿಗೆ ಮಾತುಕತೆ

ದುರಂತಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತದೇಹಗಳನ್ನು ಶೀಘ್ರ ಕರ್ನಾಟಕಕ್ಕೆ ತರಲು ಉತ್ತರಾಖಂಡದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಸಂಕಷ್ಟದ ಸಮಯದಲ್ಲಿ ರಾಜ್ಯ ಸರ್ಕಾರ ಕುಟುಂಬಗಳ ಬೆಂಬಲಕ್ಕೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

Must Read

Skip to toolbar