ಹೊಸದಿಗಂತ ವರದಿ ಬೆಳಗಾವಿ :
ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಬೆಳಗಾವಿ ತಾಲೂಕು ಮುತಗಾ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.
ಹಾಜರಾತಿ ನಿರ್ವಹಣೆಗೆ ಆಲಸ್ಯ ತೋರಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸದ ಕಾರಣ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಮುತಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳು ಕಂಡುಬಂದಲ್ಲಿ ಬಡಾವಣೆ ಮಾಲೀಕರು ಮತ್ತು ಪಿಡಿಒಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ಗುತ್ತಿಗೆದಾರ ಜಿ.ಎಸ್.ಟಿ ನೋಂದಣಿ, ಗುತ್ತಿಗೆದಾರರ ರಸೀದಿ ನೀಡಬೇಕು. ಒಂದು ವೇಳೆ ಅಕ್ರಮ ವಹಿವಾಟು ಕಂಡುಬಂದಲ್ಲಿ ಅಂತವರ ಲೋಕಾಯುಕ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು.

ಮುತಗಾ ಅಂಗನವಾಡಿಗೆ ಭೇಟಿ
ಅಂಗನವಾಡಿ ಶಿಕ್ಷಕಿಯರಿಂದ ಮಾಹಿತಿ ಪಡೆದು, ಅಂಗನವಾಡಿ ಕೇಂದ್ರಗಳಲ್ಲಿ ಅಡುಗೆ ಅನಿಲ ಬಳಕೆ ಕುರಿತು ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ವಸ್ತುಗಳಿಂದ ಮಕ್ಕಳನ್ನು ದೂರವಿರಿಸಬೇಕು. ಗರ್ಭಿಣಿಯರು ಮೊಟ್ಟೆ, ಮಕ್ಕಳಿಗೆ ಪೌಷ್ಟಿಕ ಆಹಾರ, ಕಲಿಕಾ ಸಾಮಗ್ರಿಗಳು ಸೇರಿಯಂತೆ ಎಲ್ಲವನ್ನು ಸುವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ಮಕ್ಕಳ ಊಟ, ಗರ್ಭಿಣಿಯರ ಪೌಷ್ಟಿಕ ಆಹಾರ ಸೇರಿದಂತೆ ಅಗತ್ಯ ಸೌಲಭ್ಯಗಳು ಕೊರತೆಯದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಎಚ್ಚರಿಕೆ ನೀಡಿದರು.

ಮುಚ್ಚಂಡಿ ಗ್ರಾಮ ಪಂಚಾಯಿತಿಗೆ ಭೇಟಿ
ಇದೇ ವೇಳೆ, ಮುಚ್ಚಂಡಿ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳ ಹಾಜರಾತಿ ಪುಸ್ತಕ, ಮೂವ್ಮೆಂಟ್ ರಿಜಿಸ್ಟರ್, ಸಿಬ್ಬಂದಿಗಳ ವಿವರ, ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳು ಮತ್ತು ಅವುಗಳ ವಿಲೇವಾರಿ ಹಾಗೂ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು.
ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಾತಿ ನಿರ್ವಹಿಸಬೇಕು. ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲಿ ಲಭ್ಯವಿರಬೇಕು. ಹಾಜರಾತಿ ಮತ್ತು ಚಲನವಲನ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಚರಂಡಿ ನೀರಿನ ಸಮರ್ಪಕ ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯವಿರುವ ಕಡೆ ಇಂಗು ಗುಂಡಿಗಳನ್ನು ನಿರ್ಮಿಸಬೇಕು. ಈ ಕಾಮಗಾರಿಗಳಲ್ಲಿ ಅನುದಾನ ದುರ್ಬಳಕೆ ಅಥವಾ ಅಕ್ರಮಗಳು ನಡೆದಿರುವುದು ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಾಗಿ ಗಮನಕ್ಕೆ ಬಂದಿದ್ದು, ಕೆಟ್ಟುಹೋಗಿರುವ ಬೋರ್ವೆಲ್ಗಳನ್ನು ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು.
ಇದನ್ನೂ ಓದಿ:
ಕಾಮಗಾರಿ ನಡೆಸದೆ ಹಣ ಬಿಡುಗಡೆ ಮಾಡುವುದು, ನಕಲಿ ದಾಖಲೆ ಸೃಷ್ಟಿಸುವುದು, ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ಎಸಗುವುದು ಅಥವಾ ಸರಕಾರಿ ಹಣ ದುರ್ಬಳಕೆ ಮಾಡಿಕೊಳ್ಳುವುದು ಕಂಡುಬಂದಲ್ಲಿ ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೇರಿದಂತೆ ತಪ್ಪಿತಸ್ಥ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿ. ವೀರಪ್ಪ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಉಪ ನಿಬಂಧಕ ಅರವಿಂದ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ್, ಬೆಳಗಾವಿ ಲೋಕಾಯುಕ್ತ ಅಧೀಕ್ಷಕ ಪ್ರಸನ್ನ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



