ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದಿನಿಂದ ಒಂದು ವಾರದವರೆಗೆ ಕರ್ನಾಟಕದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ದಿನವಿಡೀ ಮೋಡ ಕವಿದು ವಾತಾವರಣವಿರಲಿದೆ. ನಗರದ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ವಾತಾವರಣದಲ್ಲಿ ಶೇ. 60 ರಷ್ಟು ತೇವಾಂಶವಿರಲಿದ್ದು, ತಂಪಾದ ಗಾಳಿ ಬೀಸಲಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ, ನವೆಂಬರ್ 3 ರಂದು ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 1 ರಿಂದ 5 ರವರೆಗೆ ಅಲ್ಲಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಜನರಿಗೆ ಸೂಚಿಸಲಾಗಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವಾತಾವರಣವು ಬದಲಾಗಲಿದೆ. ಇಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಂಭವವಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಆದರೆ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಭಾಗಗಳಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯಲಿದ್ದು, ಚಳಿಯ ಪ್ರಭಾವ ತುಸು ಹೆಚ್ಚಾಗಲಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ವರುಣನ ಕೃಪೆ ಮತ್ತು ಚಳಿಯ ಅಬ್ಬರ ಎರಡೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿವೆ.



