November 1, 2026
Sunday, November 1, 2026
spot_img

ಖಾಸಗಿ ಕಂಪನಿ, ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಸಿಎಂ ಡಿ.ಕೆ.ಶಿವಕುಮಾರ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಐಟಿ-ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳ ಮೇಲೆಯೂ ಕನ್ನಡದ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಗಂಭೀರ ಸಿದ್ಧತೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿಧಾನಸೌಧದ ಮೇಲೂ ಕನ್ನಡ ಬಾವುಟ ಹಾರಿಸಲು ಚಿಂತನೆ

ರಾಜ್ಯದ ಆಡಳಿತ ಕೇಂದ್ರವಾದ ವಿಧಾನಸೌಧದ ಮೇಲೆಯೂ ಕನ್ನಡದ ಧ್ವಜವನ್ನು ಹಾರಿಸುವ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಪ್ರಾಥಮಿಕ ಚರ್ಚೆಗಳು ನಡೆದಿವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಮುಂಬರುವ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪಿಸಿ, ಸಾರ್ವಜನಿಕರು ಹಾಗೂ ಶಾಸಕರ ಮುಕ್ತ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು. ತದನಂತರ ಈ ಮಹತ್ವದ ನಿರ್ಣಯವನ್ನು ಕೇಂದ್ರ ಸರ್ಕಾರದ ಅನುಮತಿಗಾಗಿ ಕಳುಹಿಸಿಕೊಡಲಾಗುವುದು ಎಂದರು.

ಕನ್ನಡ ಧ್ವಜಕ್ಕೆ ನವ ರೂಪ

ಸದ್ಯ ಚಾಲ್ತಿಯಲ್ಲಿರುವ ಸಾಂಪ್ರದಾಯಿಕ ಹಳದಿ ಮತ್ತು ಕೆಂಪು ಬಣ್ಣದ ಕನ್ನಡ ಧ್ವಜಕ್ಕೆ ಮತ್ತೊಂದು ಹೊಸ ಬಣ್ಣವನ್ನು ಸೇರಿಸಲು ಹಾಗೂ ಅದರ ಮಧ್ಯ ಭಾಗದಲ್ಲಿ ಕರ್ನಾಟಕದ ಅಧಿಕೃತ ‘ರಾಜ್ಯ ಲಾಂಛನ’ವನ್ನು ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. 71 ಮತ್ತು 72ರ ಚೌಕಟ್ಟಿನಲ್ಲಿ ರಾಜ್ಯೋತ್ಸವವನ್ನು ವಿನೂತನವಾಗಿ ಆಚರಿಸಲು ಅಗತ್ಯವಾದ ಮಾರ್ಗಸೂಚಿಗಳೊಂದಿಗೆ ಧ್ವಜದ ಹೊಸ ಮಾದರಿಯನ್ನು ಅಂತಿಮಗೊಳಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ:

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿರುವ ನಾಡದೇವಿ ಭುವನೇಶ್ವರಿಯ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.”ನಮ್ಮ ನೆಲ, ಜಲ, ಭಾಷೆ ಮತ್ತು ಧ್ವಜವನ್ನು ರಕ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಭಾರತದ ಬೇರೆ ಯಾವುದೇ ರಾಜ್ಯದಲ್ಲೂ ಇಂತಹ ವಿಶಿಷ್ಟ ಧ್ವಜ ಸಂಸ್ಕೃತಿ ಇಲ್ಲ. ದೇಶ-ವಿದೇಶಗಳಲ್ಲಿ ಕನ್ನಡದ ಕೀರ್ತಿಯನ್ನು ಪಸರಿಸುತ್ತಿರುವ ಪ್ರತಿಯೊಬ್ಬ ಕನ್ನಡಿಗನಿಗೂ 71ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

Must Read

Skip to toolbar