November 1, 2026
Sunday, November 1, 2026
spot_img

ಕರ್ನಾಟಕ ಏಕೀಕರಣದ ಹೋರಾಟಗಾರರಿಗೆ ನಮನ: ಗ್ಯಾರಂಟಿ ಯೋಜನೆ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ಕನ್ನಡ ಭಾಷಿಕ ಪ್ರದೇಶಗಳನ್ನು ಒಗ್ಗೂಡಿಸಿ ಅಖಂಡ ಕರ್ನಾಟಕ ನಿರ್ಮಾಣವಾದ ಐತಿಹಾಸಿಕ ದಿನದ ಸ್ಮರಣಾರ್ಥ 71ನೇ ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ‌

ಈ ಸಂದರ್ಭದಲ್ಲಿ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ ಮಹನೀಯರು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು ಹಾಗೂ ಕನ್ನಡ ನಾಡು-ನುಡಿಗಾಗಿ ದುಡಿದ ಹಿರಿಯರನ್ನು ಸ್ಮರಿಸುತ್ತಾ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳು ಮತ್ತು ಸಾಧನೆಗಳನ್ನು ಜನರ ಮುಂದಿಡಲಾಗಿದೆ.

ಆಲೂರು ವೆಂಕಟರಾಯರು ಸೇರಿದಂತೆ ಅನೇಕ ಮಹನೀಯರ ಹೋರಾಟದ ಫಲವಾಗಿ 1956ರ ನವೆಂಬರ್ 1ರಂದು ವಿಶಾಲ ಮೈಸೂರು ರಾಜ್ಯ ಉದಯಿಸಿತು. ನಂತರ ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಕಿತ್ತೂರು ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಅವರ ಹೋರಾಟದ ನೆಲೆಯಾಗಿರುವ ಬೆಳಗಾವಿ ಜಿಲ್ಲೆ ಕರ್ನಾಟಕ ಏಕೀಕರಣ ಚಳವಳಿಯಲ್ಲಿಯೂ ಮಹತ್ವದ ಕೊಡುಗೆ ನೀಡಿದೆ. ಗಂಗಾಧರರಾವ್ ದೇಶಪಾಂಡೆ, ಗಂಗಾಧರ ತುರಮುರಿ, ಬೆಟಗೇರಿ ಕೃಷ್ಣಶರ್ಮ, ಶಂ.ಬಾ. ಜೋಶಿ ಸೇರಿದಂತೆ ಅನೇಕ ಮಹನೀಯರ ಸೇವೆ ಸ್ಮರಣೀಯವಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಗಡಿ ಜಿಲ್ಲೆಯ ಬೆಳಗಾವಿಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡುವ ಘೋಷಣೆ ಮಾಡಲಾಗಿದೆ. ಸವದತ್ತಿ ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ 215.37 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಜಿಲ್ಲೆಯಲ್ಲಿ ಒಂದೇ ದಿನ 4,634 ಯೂನಿಟ್ ರಕ್ತ ಸಂಗ್ರಹಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ನಿರ್ಮಿಸಿರುವುದು ಗಮನಾರ್ಹ ಸಾಧನೆಯಾಗಿದೆ. ಅಲ್ಲದೆ, ಬೆಳಗಾವಿಯಲ್ಲಿ 9.90 ಕೋಟಿ ರೂ. ವೆಚ್ಚದಲ್ಲಿ ಪತ್ರಿಕಾಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.

ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಆದ್ಯತೆ

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 7.52 ಲಕ್ಷ ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ 7.50 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮಳೆ ಕೊರತೆಯಿಂದ 14 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, 680.32 ಕೋಟಿ ರೂ. ಬೆಳೆ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 79,637 ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು

ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 2023ರ ಜೂನ್‌ನಿಂದ 2026ರ ಸೆಪ್ಟೆಂಬರ್‌ವರೆಗೆ 65.35 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದಕ್ಕಾಗಿ 1,700 ಕೋಟಿ ರೂ. ಮೌಲ್ಯದ ಶೂನ್ಯ ಟಿಕೆಟ್ ವಿತರಿಸಲಾಗಿದೆ.

ಗೃಹಲಕ್ಷ್ಮೀ ಯೋಜನೆಯಡಿ 11.48 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದು, 7,883 ಕೋಟಿ ರೂ. ಹಣ ನೇರವಾಗಿ ಖಾತೆಗಳಿಗೆ ಜಮೆಯಾಗಿದೆ. ಗೃಹಜ್ಯೋತಿ ಯೋಜನೆಯಡಿ 10.34 ಲಕ್ಷ ಗ್ರಾಹಕರು ನೋಂದಣಿಯಾಗಿದ್ದಾರೆ. ಯುವನಿಧಿ ಯೋಜನೆಯಡಿ 57,219 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ಪಾವತಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸಲಾಗುತ್ತಿದೆ.

ಆರೋಗ್ಯ, ಕುಡಿಯುವ ನೀರು ಮತ್ತು ಮೂಲಸೌಕರ್ಯ

ಗೋಕಾಕದಲ್ಲಿ 40 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಬೈಲಹೊಂಗಲದಲ್ಲಿ 23 ಕೋಟಿ ರೂ. ವೆಚ್ಚದ ಕ್ರಿಟಿಕಲ್ ಕೇರ್ ಬ್ಲಾಕ್ ಕಾಮಗಾರಿ ಪ್ರಗತಿಯಲ್ಲಿದೆ. ರಾಮದುರ್ಗ, ಸವದತ್ತಿ ಹಾಗೂ ಕಿತ್ತೂರಿನಲ್ಲಿ ಸಾರ್ವಜನಿಕ ಆಸ್ಪತ್ರೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗಗಳಲ್ಲಿ ಒಟ್ಟು 62 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಮೂಲಕ 979 ಜನವಸತಿಗಳಿಗೆ ನೀರು ಪೂರೈಸಲಾಗುತ್ತಿದೆ. ಉದ್ಯೋಗ ಖಾತರಿ ಯೋಜನೆಯಡಿ 20.24 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆ. ಬೆಳಗಾವಿ ವಿಭಾಗದ 544 ಗ್ರಾಮಗಳನ್ನು ಹರ್ ಘರ್ ಜಲ ಗ್ರಾಮಗಳೆಂದು ಘೋಷಿಸಲಾಗಿದೆ.

ಇದನ್ನೂ ಓದಿ:

ಬೆಳಗಾವಿ ನಗರದಲ್ಲಿ 75 ಕೋಟಿ ರೂ. ವೆಚ್ಚದ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 10 ಕೋಟಿ ರೂ. ವೆಚ್ಚದ ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಪ್ರಗತಿಯಲ್ಲಿದೆ.

ಕನ್ನಡ ಭಾಷೆ, ನೆಲ, ಜಲ ಹಾಗೂ ಸಂಸ್ಕೃತಿಯ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಏಕೀಕರಣದ ಹಿರಿಯರ ಆಶಯದಂತೆ ಸಮಗ್ರ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

Must Read

Skip to toolbar