ಹೊಸದಿಗಂತ ವರದಿ ಬೆಳಗಾವಿ:
ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ರೈತರ ಹಿತಾಸಕ್ತಿ ಕಾಪಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದು, ನಾಳೆ ಮಧ್ಯಾಹ್ನದ ವೇಳೆ ಮತ್ತೊಮ್ಮೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಮಂಗಳವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಖಾನೆ ಮಾಲೀಕರು ರೈತರಿಗೆ ನೀಡುವ ಕಬ್ಬಿನ ದರದ ಕುರಿತು ತಮ್ಮ ನಿರ್ಧಾರ ಪ್ರಕಟಿಸಬೇಕಿದೆ. ಸಕ್ಕರೆಯ ಕನಿಷ್ಠ ಮಾರಾಟ ದರ (ಎಂಎಸ್‌ಪಿ) ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಯಲಿದೆ.
ನಾಳೆ ಮಧ್ಯಾಹ್ನ 12 ಗಂಟೆಯೊಳಗೆ ಕಾರ್ಖಾನೆ ಮಾಲೀಕರು ತಮ್ಮ ನಿರ್ಧಾರ ಪ್ರಕಟಿಸದಿದ್ದರೆ ಜೈಲ್ ಭರೋ ಚಳವಳಿಯನ್ನು ಮುಂದುವರಿಸಲಾಗುವುದು ಎಂದು ರೈತ ಮುಖಂಡರು ತಿಳಿಸಿದ್ದಾರೆ ಎಂದರು.
ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡಿಸಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಆದರೆ, ಕಾರ್ಖಾನೆ ಮಾಲೀಕರ ಸಹಕಾರವಿಲ್ಲದೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಕಷ್ಟ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯ ಪಟ್ಟರು.



