ಹೊಸದಿಗಂತ ವರದಿ ಬೆಳಗಾವಿ:
ಪ್ರತಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಆದರೆ ರೈತರ ನಿರಂತರ ಪ್ರತಿಭಟನೆ, ಮನವಿ ಹಾಗೂ ಒತ್ತಾಯಗಳ ನಡುವೆಯೂ ಬೇಡಿಕೆ ಈಡೇರದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಇತ್ತೀಚೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ್ದರು. ಆದರೆ ಸಭೆಯಲ್ಲಿ ರೈತರ ಸಮಸ್ಯೆಗೆ ಸೂಕ್ತ ಪರಿಹಾರ ದೊರೆಯದೆ, ಕೇವಲ ಚಾಕೊಲೇಟ್ ನೀಡಿ ಕಳುಹಿಸಿದಂತಾಗಿದೆ ಎಂದು ಆರೋಪಿಸಿ ರೈತರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವರ ಮನೆಗೆ ರೈತರು ಮುತ್ತಿಗೆ ಹಾಕಿದ ಹಿನ್ನೆಲೆಯಲ್ಲಿ ಮಂಗಳವಾರ ರೈತರೊಂದಿಗೆ ಸಭೆ ನಡೆಸಿ ಕಬ್ಬಿನ ಬೆಂಬಲ ಬೆಲೆ ನಿಗದಿಪಡಿಸುವ ಭರವಸೆ ನೀಡಲಾಗಿತ್ತು. ಆದರೆ ರಾತ್ರಿ ನಡೆದ ಸಭೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಹಾಗೂ ಶಶಿಕಾಂತ್ ಗುರುಜೀ ಅವರು ಗೈರಾಗಿದ್ದ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಮತ್ತೊಂದು ಸಭೆ ನಿಗದಿಪಡಿಸಲಾಗಿತ್ತು. ಆದರೆ ಆ ಸಭೆಯೂ ನಡೆಯದೆ, ರೈತರ ಸಮಸ್ಯೆಗೆ ಪರಿಹಾರ ದೊರೆಯದಿರುವುದು ಮತ್ತಷ್ಟು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.
ಇದೀಗ ರೈತರ ಹೋರಾಟ ಮತ್ತೊಂದು ಹಂತ ತಲುಪಿದ್ದು, ಗುರುವಾರ ಇಂದು ಬೆಳಗಾವಿಯ ಹಿಂಡಲಗಾ ಜೈಲಿಗೆ ಜೈಲು ಭರೋ ಯಾತ್ರೆ ತಲುಪಲಿದೆ. ಕಬ್ಬಿಗೆ ನ್ಯಾಯಯುತ ಬೆಂಬಲ ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ನಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಿ, ಈ ಹೋರಾಟ ಇತಿಹಾಸವಾಗಲಿ ಎಂದು ರೈತರು ಪಟ್ಟು ಹಿಡಿದಿದ್ದಾರೆ.
ಇದೇ ವೇಳೆ ಕೆಲ ರೈತರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬೀಗ ಜಡಿಯಲು ಮುಂದಾದರು. ನಮ್ಮ ಹೋರಾಟಕ್ಕೆ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ಬೆಲೆ ನೀಡುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬದಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಖಾನೆಗಳಿಗೆ ಮುತ್ತಿಗೆ ಎಚ್ಚರಿಕೆ:
ರೈತರ ಸಮಸ್ಯೆಗಳಿಗೆ ಇನ್ನೂ ಕಾಲಮಿತಿಯೊಳಗೆ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದರು.
ಇದನ್ನೂ ಓದಿ;
ರೈತರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ, ಪ್ರತಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ.



