ಹೊಸದಿಗಂತ ವರದಿ ಬೆಳಗಾವಿ:
ಕುಂದಾನಗರಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ದಿನಗಣನೆ ಆರಂಭವಾಗಿದ್ದು, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರಾಜ್ಯದ ವಿವಿಧ ಸಂಘಟನೆಗಳು ಸಜ್ಜಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲು ಪೊಲೀಸ್ ಇಲಾಖೆ ಸಿದ್ಧತೆ ಆರಂಭಿಸಿದೆ.
ಅಧಿವೇಶನದ ಸಂದರ್ಭದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು, ಕಾರ್ಮಿಕರು, ವಿವಿಧ ಸಂಘಟನೆಗಳು ಸೇರಿದಂತೆ ಹಲವು ಪ್ರತಿಭಟನಾಕಾರರು ಬೆಳಗಾವಿಗೆ ಆಗಮಿಸುವ ನಿರೀಕ್ಷೆಯಿದೆ. ಪ್ರತಿಭಟನೆ, ಮೆರವಣಿಗೆ ಹಾಗೂ ಸುವರ್ಣ ವಿಧಾನಸೌಧ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಅವರು ಶನಿವಾರ ಪ್ರತಿಭಟನೆಗಳಿಗೆ ನಿಗದಿಪಡಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭದ್ರತಾ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಹಾಗೂ ಅಗತ್ಯ ಪೂರ್ವಸಿದ್ಧತೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಸೂಚನೆ ನೀಡಿದರು. ಅಧಿವೇಶನ ಸುಗಮವಾಗಿ ನಡೆಯುವಂತೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದ ರೀತಿಯಲ್ಲಿ ಪೊಲೀಸ್ ಪಡೆ ಕಾರ್ಯತತ್ಪರವಾಗಿದೆ.



