November 8, 2026
Sunday, November 8, 2026
spot_img

‘ಭ್ರಷ್ಟಾಚಾರ ರೇಟ್ ಕಾರ್ಡ್’ ಜಾಹೀರಾತು ಪ್ರಕರಣ: ಸಿದ್ದರಾಮಯ್ಯ, ಡಿಕೆಶಿಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪ್ರಕಟಿಸಲಾಗಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಜಾಹೀರಾತು ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ರಿಲೀಫ್ ಸಿಕ್ಕಿದೆ.

ಈ ಸಂಬಂಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣಾ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.

ಏನಿದು ‘ಭ್ರಷ್ಟಾಚಾರದ ರೇಟ್ ಕಾರ್ಡ್’ ವಿವಾದ?

2023ರ ಮೇ 5ರಂದು ಕಾಂಗ್ರೆಸ್ ಪಕ್ಷ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ‘ಭ್ರಷ್ಟಾಚಾರದ ರೇಟ್ ಕಾರ್ಡ್’ ಶೀರ್ಷಿಕೆಯಡಿ ಜಾಹೀರಾತು ಪ್ರಕಟಿಸಿತ್ತು. ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಕುರಿತು ಆರೋಪಗಳನ್ನು ಒಳಗೊಂಡಿದ್ದ ಈ ಜಾಹೀರಾತು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿತ್ತು.

ಈ ಜಾಹೀರಾತಿನಿಂದ ಬಿಜೆಪಿ ಪಕ್ಷದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು.

ಇದನ್ನೂ ಓದಿ:

ಹೈಕೋರ್ಟ್‌ನಲ್ಲಿ ಏನೆಂದು ವಾದಿಸಲಾಯಿತು?

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಪರ ವಕೀಲರು, ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 199ರ ಅಡಿಯಲ್ಲಿ ಅಗತ್ಯ ಪ್ರಕ್ರಿಯೆ ಪಾಲನೆಯಾಗಿಲ್ಲ ಎಂದು ವಾದಿಸಿದರು. ಅಲ್ಲದೆ, ದೂರುದಾರರು ನೇರವಾಗಿ ಬಾಧಿತರಾದ ವ್ಯಕ್ತಿಯಲ್ಲ ಎಂಬ ಅಂಶವನ್ನೂ ನ್ಯಾಯಾಲಯದ ಗಮನಕ್ಕೆ ತಂದರು.

ಇದೇ ಪ್ರಕರಣದಲ್ಲಿ ಈ ಹಿಂದೆ ರಾಹುಲ್ ಗಾಂಧಿ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನೂ ಹೈಕೋರ್ಟ್ ರದ್ದುಗೊಳಿಸಿತ್ತು.

ನ್ಯಾಯಾಲಯ ಹೇಳಿದ್ದೇನು?

ಹಿಂದಿನ ತೀರ್ಪನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಒಂದೇ ಘಟನೆಗೆ ಸಂಬಂಧಿಸಿದ ಸಮಾನ ಆರೋಪಗಳಿರುವಾಗ ಸೂಕ್ತ ಕಾರಣವಿಲ್ಲದೆ ಸಹ ಆರೋಪಿಗಳ ವಿರುದ್ಧ ವಿಭಿನ್ನ ನಿಲುವು ತಾಳಲು ಸಾಧ್ಯವಿಲ್ಲ ಎಂಬ ಸುಪ್ರೀಂ ಕೋರ್ಟ್‌ನ ತತ್ವವನ್ನು ಪರಿಗಣಿಸಿದರು.

Must Read

Skip to toolbar