ಹೊಸದಿಗಂತ ವರದಿ ಮುಂಡಗೋಡ:
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದು ಆಕೆ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದ ಬಳಿಕ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿ, ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಆರೋಪಿಯ ಮನೆಗೆ ಹಾನಿ ಮಾಡಿದ್ದರು. ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.
ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ್ದಾನೆ ಎಂಬ ಆರೋಪದ ಮೇಲೆ ಪೊಲೀಸರು 65 ವರ್ಷದ ವೃದ್ಧನೊಬ್ಬನನ್ನು ಈಗಾಗಲೇ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರೊಚ್ಚಿಗೆದ್ದ ಕೆಲವರು ಶನಿವಾರ ರಾತ್ರಿ ಆರೋಪಿಯ ಮನೆಯನ್ನು ಧ್ವಂಸಗೊಳಿಸಿದ್ದರು.
ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಗೀತಾ ಪಾಟೀಲ, ಸಿಪಿಐ ರಮೇಶ ಹಾನಾಪುರ, ಪಿಎಸ್‌ಐ ಮಂಜುನಾಥ ಗೌಡರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ತಡರಾತ್ರಿಯೇ ಎಸ್ಪಿ ದೀಪನ್ ಎಂ ಎನ್, ಹೆಚ್ಚುವರಿ ಎಸ್ಪಿ ಜಿ ಕೃಷ್ಣಮೂರ್ತಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದರು. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ಭಾನುವಾರವೂ ಗ್ರಾಮದಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿ, ಬಿಗಿ ಬಂದೋಬಸ್ತ್ ಕಲ್ಪಿಸಿದೆ.
ಇದನ್ನೂ ಓದಿ:
ಮನೆ ಧ್ವಂಸ, ಪ್ರಕರಣ ದಾಖಲು:
ಶನಿವಾರ ರಾತ್ರಿ ಗ್ರಾಮದ ಕೆಲವರು ತಮ್ಮ ಮನೆಯನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ, ಆರೋಪಿಯ ಪುತ್ರ ಗ್ರಾಮದ ಕೆಲ ಸಂಶಯಾಸ್ಪದ ವ್ಯಕ್ತಿಗಳ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.



