ಹೊಸದಿಗಂತ ವರದಿ ಯಾದಗಿರಿ:
ಕಳ್ಳತನ ಪ್ರಕರಣವೊಂದನ್ನು ರಾಜಿ ಮಾಡಿಸುವುದಾಗಿ ಹೇಳಿ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗುರ್ಮಿಟ್ಕಲ್ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ತಾತಳಗೇರಾ ಗ್ರಾಮದ ಖಾಜಾಬಿ ಅವರು ನೀಡಿದ ದೂರಿನ ಮೇರೆಗೆ ಯಾದಗಿರಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಸಿ ಅಶೋಕ್ ಅವರು ಕಳ್ಳತನ ಪ್ರಕರಣ ರಾಜಿ ಮಾಡಿಸಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ:
ಈ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಕಲಂ 7(ಎ) ಅಡಿಯಲ್ಲಿ ಯಾದಗಿರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್. ಇನಾಮದಾರ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಅಮರನಾಥ, ನವೀನ್, ಗಂಗಾಧರ, ರಣೋಜಿ ಮತ್ತು ಸದ್ದಾಂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ರಾಜು ಸಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.
ಪೊಲೀಸ್ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.



