ಹೊಸದಿಗಂತ ಡಿಜಿಟಲ್ ಡೆಸ್ಕ್:
ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆದ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ವೇಳೆ ಅಹಿತಕರ ಘಟನೆಗಳು ಸಂಭವಿಸಿದೆ. ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದಾಗಿ ಮಗು ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ರಥೋತ್ಸವವನ್ನೂ ಅರ್ಧಕ್ಕೆ ನಿಲ್ಲಿಸಲಾಗಿದೆ.
ಜಾತ್ರೆ ವೇಳೆ ಪಟಾಕಿ ಸಿಡಿಸುವ ವಿಷಯಕ್ಕೆ ಗಲಾಟೆ ಆಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಲ್ಲು ತೂರಾಟ ಆರಂಭವಾಗಿದೆ. ಇದರ ಮಧ್ಯದಲ್ಲಿ ಯಾವ ಗುಂಪಿಗೂ ಸೇರದ ಭರತ್, ಆನಂದ್, ಅಭಿ ಹಾಗೂ ಮಗುವಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ತಗಡೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ರಥೋತ್ಸವವನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ. ಮೆರವಣಿಗೆ ವೇಳೆ ಪೊಲೀಸರ ಸೂಕ್ತ ಭದ್ರತೆ ಇರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಬೇಕು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದು ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.



