ಹೊಸದಿಗಂತ ವರದಿ ಉಳ್ಳಾಲ
ಬಿಜೆಪಿ ಸರ್ಕಾರದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ 25 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಲಾಗಿತ್ತು. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬಹಿರಂಗಪಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಮಾಜಿ ಕಾರ್ಯದರ್ಶಿ ವಿಕಾಸ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಉಳ್ಳಾಲ ಮಹಾಶಕ್ತಿ ಕೇಂದ್ರದ ವತಿಯಿಂದ ಉಳ್ಳಾಲ ನಗರಸಭೆ ಕಚೇರಿ ಮುಂಭಾಗ ಗುರುವಾರ ಆಯೋಜಿಸಿದ್ದ ‘ನಮ್ಮ ಹಕ್ಕು ನಮಗೆ ನೀಡಿ’ ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಪಂಚ ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದರೂ, ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿಲ್ಲ. ಬಿಜೆಪಿ ಪ್ರತಿಭಟನೆ ನಡೆಸಿದಾಗ ಮಾತ್ರ ಬಾಕಿ ಕಂತುಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಜನರ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಉತ್ಪಾದನೆಯೂ ನಡೆಯುತ್ತಿಲ್ಲ ಎಂದು ಟೀಕಿಸಿದರು.
ಕೇಂದ್ರ ಸರ್ಕಾರದ 16ನೇ ಹಣಕಾಸು ಆಯೋಗದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಅಡ್ಡಿಪಡಿಸುತ್ತಿದೆ. ಕೇಂದ್ರದ ಅನುದಾನದಲ್ಲಿ ಅಭಿವೃದ್ಧಿ ನಡೆದರೆ ಅದರ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂಬ ಕಾರಣಕ್ಕೆ ಯೋಜನೆಗಳ ಅನುಷ್ಠಾನಕ್ಕೆ ತಡೆಯೊಡ್ಡಲಾಗುತ್ತಿದೆ ಎಂದು ದೂರಿದರು. ಆವಾಸ್ ಯೋಜನೆಯ ಅರ್ಜಿಗಳನ್ನೂ ಸ್ವೀಕರಿಸಿ ಮುಂದಕ್ಕೆ ಕಳುಹಿಸುವ ಕೆಲಸ ಸಮರ್ಪಕವಾಗಿ ನಡೆಯುತ್ತಿಲ್ಲ. ಜನನ, ಮರಣ ಮತ್ತು ಪಹಣಿ ಪ್ರಮಾಣಪತ್ರಗಳ ಶುಲ್ಕವೂ ದುಬಾರಿಯಾಗಿದೆ ಎಂದು ಆರೋಪಿಸಿದರು.
ಜಾತ್ಯತೀತತೆಯ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉಳ್ಳಾಲ ಕ್ಷೇತ್ರದಿಂದ ಹಿಂದೂ ಅಭ್ಯರ್ಥಿಗೆ ಟಿಕೆಟ್ ನೀಡಿ ಸ್ಪರ್ಧೆಗೆ ಇಳಿಸಲಿ ಎಂದು ಸವಾಲು ಹಾಕಿದರು.
ಬಿಜೆಪಿ ಉಳ್ಳಾಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸುರೇಂದ್ರ ಶೆಟ್ಟಿ ಮಂಚಿಲ ಅಧ್ಯಕ್ಷತೆ ವಹಿಸಿದ್ದರು.ಬಿಜೆಪಿ ಮಂಡಲ ಉಪಾಧ್ಯಕ್ಷರಾದ ರವಿಶಂಕರ್ ಸೋಮೇಶ್ವರ,ಮಾಜಿ ಮಂಡಲ ಪ್ರದಾನರಾದ ಬಾಬು ಬಂಗೇರ,ಜಿಲ್ಲಾ ವಕ್ತಾರರಾದ ಜೀವನ್ ಕುಮಾರ್ ತೊಕ್ಕೊಟ್ಟು,ಮಂಡಲ ಮಹಿಳಾ ಮೋರ್ಚದ ಅಧ್ಯಕ್ಷೆ ಮಾಧವಿ ಉಳ್ಳಾಲ್,ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಹರಿಯಪ್ಪ ಸಾಲಿಯಾನ್,ಮಂಡಲ ಕಾರ್ಯದರ್ಶಿ ಸತ್ಯವತಿ,ಪ್ರಮುಖರಾದ ಗಣೇಶ್ ಕಾಪಿಕಾಡು,ಮಹಮ್ಮದ್ ಅಸ್ಗರ್,ಸಂಪತ್ ಕುಕ್ಯಾನ್,ಸೂರಜ್ ಸಾಗರ್,ಆನಂದ ಶೆಟ್ಟಿ ಭಟ್ನಗರ, ಕರೀಂ ಉಚ್ಚಿಲ್,ರವೀಂದ್ರ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.



