November 13, 2026
Friday, November 13, 2026
spot_img

WEATHER | ಕರ್ನಾಟಕದಲ್ಲಿ ಮುಂದುವರಿದ ಒಣಹವೆ: ಮಳೆಯಿಲ್ಲ, ಚಳಿಯದ್ದೇ ಹಾವಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಾದ್ಯಂತ ಮಳೆಯ ಅಬ್ಬರ ಸಂಪೂರ್ಣವಾಗಿ ತಗ್ಗಿದ್ದು, ಈಗ ಚಳಿಯ ವಾತಾವರಣ ತನ್ನ ಪ್ರಭಾವ ಬೀರಲು ಆರಂಭಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದಿದ್ದು, ಬೆಳಗಿನ ಜಾವ ಮತ್ತು ರಾತ್ರಿ ವೇಳೆ ಜನರಿಗೆ ಚಳಿಯ ಅನುಭವ ದಟ್ಟವಾಗಿ ಕಾಡುತ್ತಿದೆ.

ರಾಜ್ಯದ ಬಯಲು ಪ್ರದೇಶಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ 10.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಮುಂಬರುವ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಿಲ್ಲದೆ ಸಂಪೂರ್ಣ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಜೊತೆಗೆ ತಂಪಾದ ಗಾಳಿ ಬೀಸಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಇದೇ ವಾತಾವರಣ ಮುಂದುವರಿಯಲಿದೆ.

ಮಳೆ ಇಲ್ಲದಿದ್ದರೂ ಗಾಳಿಯಲ್ಲಿರುವ ತೇವಾಂಶ ಹಾಗೂ ಮುಂಜಾನೆಯ ಮಂಜಿನಿಂದಾಗಿ ಚಳಿಯ ಪರಿಣಾಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆರೋಗ್ಯದ ದೃಷ್ಟಿಯಿಂದ ಜನರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಈ ಹವಾಮಾನ ಬದಲಾವಣೆಯ ಸಮಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವುದು ಉತ್ತಮ.

Must Read

Skip to toolbar