ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪವಿರುವ ರಂಗಜನ್ ಪ್ರದೇಶದಲ್ಲಿ ಪ್ರಯಾಣಿಕರ ವಾಹನ ಮತ್ತು ಕಂಟೈನರ್ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ಈ ಘೋರ ದುರಂತ ಸಂಭವಿಸಿದೆ.
ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ
ಘಟನೆ ಕುರಿತು ‘ಎಕ್ಸ್’ ಮೂಲಕ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. “ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಾಗಿರುವುದು ತೀವ್ರ ನೋವು ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರ ನೀಡಲಾಗುವುದು” ಎಂದು ಪ್ರಧಾನಿ ತಿಳಿಸಿದ್ದಾರೆ.
ರಾಷ್ಟ್ರಪತಿ, ರಕ್ಷಣಾ ಸಚಿವರು, ರಾಜ್ಯಪಾಲರ ಸಂತಾಪ
ಈ ದುರಂತಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಸಂತಾಪ ವ್ಯಕ್ತಪಡಿಸಿದ್ದು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಹಾಗೂ ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೂ ಘಟನೆಗೆ ಕಂಬನಿ ಮಿಡಿದಿದ್ದು, ಈ ದುರ್ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಎಂದು ಹೇಳಿದ್ದಾರೆ.
ರಕ್ಷಣಾ ಕಾರ್ಯಾಚರಣೆ
ಸ್ಥಳೀಯ ಶಾಸಕರೂ ಆಗಿರುವ ಅಸ್ಸಾಂ ಸಚಿವ ಅತುಲ್ ಬೋರಾ ಅವರು ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಉಸ್ತುವಾರಿ ವಹಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಇದುವರೆಗೆ ಅಪಘಾತದಲ್ಲಿ 24 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ 11 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೋರ್ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಉಳಿದ ಗಾಯಾಳುಗಳಿಗೆ ಬೊಕಖಾಟ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.



