November 14, 2026
Saturday, November 14, 2026
spot_img

ನಿಖಿಲ್‌ಗೆ ದೇವಸ್ಥಾನ ಪ್ರವೇಶ ನಿರಾಕರಣೆ ವಿವಾದ: ಕೈ ಕೈ ಮಿಲಾಯಿಸಿಕೊಂಡ ಜೆಡಿಎಸ್–ಕಾಂಗ್ರೆಸ್ ಕಾರ್ಯಕರ್ತರು

ಹೊಸದಿಗಂತ ವರದಿ ರಾಮನಗರ:

ಹಾರೋಹಳ್ಳಿ ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಪ್ರವೇಶಿಸಿ ನೀಡದೆ ಬೀಗ ಹಾಕಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ದೇವಸ್ಥಾನ ಬಳಿ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡ ಕುರುಬರಹಳ್ಳಿ ಗ್ರಾಮದ ಬಿಸಿಲು ಮಾರಮ್ಮ ನೂತನ ದೇವಸ್ಥಾನ ಶುಕ್ರವಾರ ಉದ್ಘಾಟನೆಯಾಗಿದ್ದು, ಈ ದೇವಸ್ಥಾನಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿಗೆ ಬಾಗಿಲು ಹಾಕಿ ದೇವಸ್ಥಾನದ ಹೊರಗೆ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಗ್ರಾಮದ ಮುಖಂಡ ತಿಮ್ಮಪ್ಪ ಮಾತನಾಡಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಆಗಮಿಸಿದ ಸಂದರ್ಭದಲ್ಲಿ ದೇವಸ್ಥಾನದ ವಿದ್ಯುತ್ ಸಂಪರ್ಕ ಕಡಿತಗೊಳಿಸಿ, ದೇವಸ್ಥಾನದ ಬಾಗಿಲು ಮುಚ್ಚಲಾಗಿದೆ ಎಂದು ಆರೋಪಿಸಿದರು.

ದೇವಸ್ಥಾನದ ಬಳಿ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರಿಗೆ ಒಳ ಪ್ರವೇಶಿಸಿ ಪೂಜೆ ಸಲ್ಲಿಸಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ದೇವಸ್ಥಾನದ ಹೊರಗಡೆಯೇ ನಿಂತು ಕೈಮುಗಿದು ವಾಪಸ್ ತೆರಳಿದ್ದಾರೆ ಎನ್ನಲಾಗಿದೆ.

ಈ ಘಟನೆಯಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಬಳಿಕ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಗೊಂದಲ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸಿದ ಘಟನೆಯನ್ನು ಖಂಡಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿ ಧರಣಿ ನಡೆಸಿದರು. ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಸಂಘರ್ಷಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ರಾಮು ಮಾತನಾಡಿ, “ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಇಂತಹ ಕೃತ್ಯವನ್ನು ನಾವು ಖಂಡಿಸುತ್ತೇವೆ. ಈ ಘಟನೆ ಇಲ್ಲಿಗೇ ನಿಲ್ಲಬೇಕು. ದೇವರ ವಿಚಾರದಲ್ಲಿ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:

ರವಿ ಕುಮಾರ್ ಮಾತನಾಡಿ, “ಈ ರೀತಿ ಮಾಡಿದವರಿಗೆ ಶಿಕ್ಷೆಯಾಗಬೇಕು. ಹಿಂದೂ ಸಂಪ್ರದಾಯದಂತೆ ಎಲ್ಲರಿಗೂ ದೇವಸ್ಥಾನಕ್ಕೆ ಮುಕ್ತ ಪ್ರವೇಶ ನೀಡಬೇಕು. ಯಾರು ಪ್ರವೇಶಕ್ಕೆ ತಡೆ ಒಡ್ಡಿದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ. ಯಾರಿಗೂ ಅವಮಾನ ಮಾಡಬಾರದು. ಈ ಘಟನೆಯನ್ನು ಶಾಸಕರು ಖಂಡಿಸಬೇಕು” ಎಂದು ಒತ್ತಾಯಿಸಿದರು.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದರು. ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಿದರು.

ದೇವಸ್ಥಾನ ಪ್ರವೇಶಕ್ಕೆ ನಿರಾಕರಣೆ ಮಾಡಲಾಗಿದೆ ಎಂಬ ಆರೋಪ ಹಾಗೂ ರಾಜಕೀಯ ಕಾರ್ಯಕರ್ತರ ನಡುವಿನ ಸಂಘರ್ಷ ಗ್ರಾಮದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Must Read

Skip to toolbar