ಹೊಸದಿಗಂತ ವರದಿ ಹಾಸನ:
ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೇಲೂರು ತಾಲೂಕಿನ ಕುಶಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಚೌಡನಹಳ್ಳಿ ಗ್ರಾಮದ ಕೂಲಿ ಕಾರ್ಮಿಕ ಮಹಿಳೆ ಜಯಮ್ಮ (45) ಮೃತಪಟ್ಟವರು. ಇವರು ಎಂದಿನಂತೆ ತಮ್ಮ ತೋಟದ ಅಂಚಿನಲ್ಲಿ ಕುರಿ ಮೇಯಿಸಲು ತೆರಳಿದ್ದರು. ಸಂಜೆ ಸುಮಾರು 3.45 ವೇಳೆಗೆ ಕುರಿಗಳನ್ನು ಮನೆಗೆ ವಾಪಸ್ ಕರೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ್ದು, ಜಯಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:
ಘಟನೆ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಜಯಮ್ಮ ಅವರಿಗೆ ಪರಮೇಶ್, ದಿನೇಶ್ ಹಾಗೂ ಜ್ಯೋತಿ ಎಂಬ ಮೂವರು ಮಕ್ಕಳಿದ್ದಾರೆ.
ಮಹಿಳೆಯ ಸಾವಿನಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೆ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕಾಡಾನೆ ದಾಳಿಯಿಂದ ಜನರು ಪ್ರಾಣ ಕಳೆದುಕೊಂಡ ಬಳಿಕ ಪರಿಹಾರ ನೀಡುವುದಷ್ಟೇ ಕ್ರಮವಾಗಿದ್ದು, ಜನರ ಜೀವ ರಕ್ಷಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.



