ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳ ದಿನಾಚರಣೆಯ ಪ್ರಯುಕ್ತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಭೇಟಿ ನೀಡಿದರು. ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಯಿಂದ ಬಳಲುತ್ತಿರುವ ಪುಟಾಣಿ ಮಕ್ಕಳ ಆರೋಗ್ಯ ವಿಚಾರಿಸಿದ ಅವರು, ಆ ಮಕ್ಕಳ ನೋವು ಕಂಡು ತೀವ್ರ ಬೇಸರ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ಗುಲಾಬಿ ಹೂವು ಮತ್ತು ಚಾಕೊಲೇಟ್ ವಿತರಿಸಿ ಧೈರ್ಯ ತುಂಬಿದರು.
ವೈದ್ಯರ ಸೇವೆಗೆ ಮೆಚ್ಚುಗೆ
ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸಾ ಸೌಲಭ್ಯಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ವೈದ್ಯರ ನಿಸ್ವಾರ್ಥ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ರೋಗಿಗಳು ಇಲ್ಲಿಗೆ ಬರುತ್ತಿದ್ದು, ಪ್ರತಿದಿನ ಸುಮಾರು 1,000 ಹಾಗೂ ವಾರ್ಷಿಕ 3.5 ಲಕ್ಷಕ್ಕೂ ಹೆಚ್ಚು ರೋಗಿಗಳು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.
ಕಿದ್ವಾಯಿ ಅಭಿವೃದ್ಧಿಗೆ ಸಿಎಂ ಘೋಷಿಸಿದ ಪ್ರಮುಖ ಯೋಜನೆಗಳು
ಚಿಕಿತ್ಸೆಗಾಗಿ ದೂರದ ಊರುಗಳಿಂದ ಮಕ್ಕಳೊಂದಿಗೆ ಬರುವ ತಾಯಂದಿರ ವಸತಿ ವ್ಯವಸ್ಥೆಗಾಗಿ ಮೂರು ಎಕರೆ ಜಾಗ ನೀಡುವಂತೆ ಮನವಿ ಬಂದಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.
ಆಸ್ಪತ್ರೆಯ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸದಾಗಿ 200 ಹಾಸಿಗೆಗಳನ್ನು ಅಳವಡಿಸಲು ಹಾಗೂ 27 ಕೋಟಿ ರೂ.ವೆಚ್ಚದ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ಸರ್ಕಾರದಿಂದ ಅನುದಾನ ಮಂಜೂರು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕೇವಲ ಬೆಂಗಳೂರಿಗೆ ಸೀಮಿತವಾಗದೆ ತುಮಕೂರು, ಮೈಸೂರು, ಬಳ್ಳಾರಿ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜಕ್ಕೂ ಕಳವಳಕಾರಿ ಸಂಗತಿಯಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದರು.



